ದೊಡ್ಡಬಳ್ಳಾಪುರ : ಕೆಮ್ಮು, ನೆಗಡಿ, ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಗೆ ಸಂಬಂಧಿಸಿದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ, ವೈದ್ಯಕೀಯ ಸಲಹೆ ಪಡೆದವರ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ರಚಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕು ಹರಡದಂತೆ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಖಾಸಗಿ ವೈದ್ಯರುಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾರ್ವಜನಿಕರ ಮಾಹಿತಿ ಸಂಗ್ರಹಣೆ ವಾಸ್ತವವಾಗಿರಬೇಕು ಎಂದರಲ್ಲದೆ, ಕಳೆದ ಹತ್ತು ದಿನಗಳ ಅವಧಿಯಲ್ಲಿ ತೀವ್ರ ಉಸಿರಾಟದ ತೊಂದರೆ, ಐಎಲ್‌ಐ ಸಂಬಂಧಿತ ಕೆಮ್ಮು, ನೆಗಡಿ, ಜ್ವರಕ್ಕೆ ಚಿಕಿತ್ಸೆ ಪಡೆದವರ ಮಾಹಿತಿ ಕ್ರೋಢಿಕರಣ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಯ ವೈದ್ಯರು ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಮಾಡಿದ್ದರೆ ಆ ಕುರಿತ ವಿವರಗಳನ್ನು ಕೂಡ ಸಂಗ್ರಹಿಸಬೇಕು ಎಂದು ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಷಯ, ಕುಷ್ಠರೋಗ, ಮತ್ತಿತರ ಖಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಗುಂಪಿನ ಜನರನ್ನು ಆಶಾ ಕಾರ್ಯಕರ್ತೆಯರು ಖುದ್ದಾಗಿ ಭೇಟಿ ಮಾಡಿ ಅಗತ್ಯ ಔಷಧಿ, ಸಲಹೆ ದೊರೆತಿದೆಯೇ ಎಂಬುದರ ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಈ ಸಮೀಕ್ಷೆ ಯಶಸ್ವಿಯಾಗಲು ಮತ್ತು ಕೋವಿಡ್-19 ಅನ್ನು ಸಂಪೂರ್ಣವಾಗಿ ತಡೆಗಟ್ಟಲು ಖಾಸಗಿ ವೈದ್ಯರ ಸಹಕಾರ ಅಗತ್ಯ ಎಂದು ಹೇಳಿದರು.
ಮೆಡಿಕಲ್ ಸ್ಟೋರ್ ಗಳಲ್ಲಿ ಎಲ್ಲಾ ಔಷಧಿ ವ್ಯಾಪಾರಿಗಳು ಔಷಧ ನಿಯಂತ್ರಣ ನಿಯಮ ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಯಬೇಕು. ಜ್ವರ ಮತ್ತು ಕೆಮ್ಮು ಇರುವವರಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ವಿತರಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಡಿ.ಫಾರ್ಮಾ, ಬಿ.ಫಾರ್ಮಾ ಪದವಿ ಪಡೆದ ಅರ್ಹರು ಔಷಧಿ ಅಂಗಡಿಗಳನ್ನು ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ನಿಯಮ ಪಾಲಿಸದೇ ಇರುವ ಔಷಧಿ ವ್ಯಾಪಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಹಾಗೂ ನೆಗಡಿ, ಕೆಮ್ಮು ಹಾಗೂ ಪ್ಯಾರಾಸಿಟಮಲ್ ಔಷಧಿಯನ್ನು ಖರೀದಿಸುತ್ತಿರುವ ಗ್ರಾಹಕರ ಮಾಹಿತಿಯ ವರದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಅಥವಾ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಯವರು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳು, ಖಾಸಗಿ ವೈದ್ಯರು ಉಪಸ್ಥಿತರಿದ್ದರು.