ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲು ಹಾಗೂ ಗ್ರಾಮಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆಯ ವಿಧಾನಗಳನ್ನು ಉತ್ತೇಜಿಸುವ ಸಲುವಾಗಿ ಜೂನ್ 05 ರಿಂದ ಜೂನ್ 19 ರವರೆಗೆ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಪಾಕ್ಷಿಕಾಚರಣೆ ಹಮ್ಮಿಕೊಂಡಿದ್ದು, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಿರುಚಿತ್ರ ನಿರ್ಮಾಣ ಯಶೋಗಾಥೆ ಲೇಖನ ಹಾಗೂ ಉತ್ತಮ ಮಾದರಿಗಳನ್ನು ಸಿದ್ಧಪಡಿಸುವ ಸಂಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸ್ವಯಂ ಸಂಸ್ಥೆಗಳ ನೌಕರರು, ಶಿಕ್ಷಕರು ಹಾಗೂ ಸಾಹಿತಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಕುರಿತು ಕಿರುಚಿತ್ರ, ಯಶೋಗಾಥೆ ಲೇಖನ ಹಾಗೂ ಮಾದರಿಗಳನ್ನು ಅತ್ಯುತ್ತಮವಾಗಿ ಸಿದ್ಧಪಡಿಸಿದವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ರೂ. 15,000 ದ್ವಿತೀಯ ಬಹುಮಾನ ರೂ. 10,000 ಮತ್ತು ತೃತೀಯ ಬಹುಮಾನ ರೂ. 5,000 ನಗದು ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ನಾಮ ನಿರ್ದೇಶನ ಮಾಡಲಾಗುವುದು.
ಕಿರುಚಿತ್ರ, ಉತ್ತಮವಾದ ಛಾಯಚಿತ್ರದೊಂದಿಗೆ ಯಶೋಗಾಥೆ(ಲೇಖನ) ಮತ್ತು ವಿನೂತನವಾಗಿ ದ್ರವ ತ್ಯಾಜ್ಯ ನಿರ್ವಹಣೆಯ ಮಾದರಿಗಳೊಂದಿಗೆ ನಿಗದಿತ ಅರ್ಜಿ ಭರ್ತಿ ಮಾಡಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110. ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ pd.zp.karbngr@nic.in ಗೆ ವಿಳಾಸಕ್ಕೆ 2020 ರ ಜೂನ್ 19 ರೊಳಗೆ ಸಲ್ಲಿಸುವುದು.
ಆಯ್ಕೆಯಾದ ಅಭ್ಯರ್ಥಿಗಳ ವಿವರಗಳನ್ನು ಜೂನ್ 30 ರಂದು ದೂರವಾಣಿ ಮತ್ತು ಇಮೇಲ್ ಮುಖಾಂತರ ಘೋಷಣೆ ಮಾಡಲಾಗುವುದು. ಜುಲೈ ಮೊದಲನೇ ವಾರದಲ್ಲಿ ವಿಜೇತರಿಗೆ ಪ್ರಶಸ್ತಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-29781060 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***********************
ಜೂನ್ 12 ರಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ದೊಡ್ಡಬಳ್ಳಾಪುರ : “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2020” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಆಟೋ ಮೂಲಕ ಜನ ಜಾಗೃತಿ ಕಾರ್ಯಕ್ರಮಕ್ಕೆ ಜೂನ್ 12 ರಂದು ಬೆಳಗ್ಗೆ 11.00 ಗಂಟೆಗೆ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
************************
ಜೂನ್ 12 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ
ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ.ಅ.ಜೊಲ್ಲೆ ಅವರ ಅಧ್ಯಕ್ಷತೆಯಲ್ಲಿ ಜೂನ್ 12 ರಂದು ಮಧ್ಯಾಹ್ನ 03.00 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನಿರ್ದೇಶಕಿ ಪುಷ್ಪಾ.ಜಿ.ರಾಯರ್ ತಿಳಿಸಿದ್ದಾರೆ.
**************