ದಾವಣಗೆರೆ: ಬಹುದಿನಗಳ ನಿರೀಕ್ಷೆಯಂತೆ ಜಿಲ್ಲೆಯಲ್ಲಿ ಶುಕ್ರವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಸಚಿವರು, ಸಂಸದರು ಹಾಗೂ ಶಾಸಕರ ಜೊತೆಗೂಡಿ ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಹಳ ದಿನಗಳಿಂದ ಕೋವಿಡ್ ಲ್ಯಾಬ್‍ನ ಬೇಡಿಕೆ ಇತ್ತು. ಇಂದು ಜಿಲ್ಲಾಡಳಿತ ನೆರವೇರಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವನಾದ ಮೇಲೆ ಜಿಲ್ಲೆಗೆ 15 ಬಾರಿ ಬಂದು ಹೋಗಿದ್ದೇನೆ. ಮುಂದಿನ ಬಾರಿ ಬಂದಾಗ ಪರೀಕ್ಷಾ ಕೇಂದ್ರ ಉದ್ಘಾಟನೆ ಮಾಡಬೇಕು ಎಂದು ಹೇಳಿದ್ದೆ. ಅದರಂತೆ ಇಂದು ನೆರವೇರಿಸಲಾಗಿದೆ. ಈ ಪರೀಕ್ಷಾ ಕೇಂದ್ರದಲ್ಲಿ 3 ಶಿಫ್ಟ್‍ನಲ್ಲಿ ಒಟ್ಟು 200 ಸ್ಯಾಂಪಲ್ ಪರೀಕ್ಷೆ ಮಾಡಬಹುದಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಹೆಚ್ಚು ಉಪಯೋಗವಾಗಲಿದೆ ಎಂದರು.
1 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ: ಹಿರಿಯ ನಾಗರಿಕರಿಗೆ ವಿಶೇಷವಾದ ಚಿಕಿತ್ಸೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರೂ. 1 ಕೋಟಿ ವೆಚ್ಚದಲ್ಲಿ 10 ಬೆಡ್‍ಗಳ ಹಿರಿಯ ನಾಗರೀಕರ ವಾರ್ಡ್ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಜೊತೆಗೆ ಸರ್ಕಾರಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಹಾಗೂ ಉನ್ನತೀಕರಿಸಲು ಸುಮಾರು ರೂ.100 ಕೋಟಿ ಬೇಕಾಗುತ್ತದೆ ಎಂದು ಮುಖ್ಯಮಂತ್ರ್ರಿಗಳಲ್ಲಿ ಮನವಿ ಮಾಡಲಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೂ ಸಹ ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.
ಮುಂದಿನ ಮೂರು ವರ್ಷದಲ್ಲಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ತರುವ ಬಗ್ಗೆ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡಲು ಸಚಿವರು ಹಾಗೂ ಶಾಸಕರೊಂದಿಗೆ ಒಗ್ಗೂಡಿ ಒತ್ತಾಯ ಮಾಡುತ್ತೇನೆ ಎಂದ ಅವರು, ಜಿಲ್ಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ದಿನ ನಿತ್ಯ ಸಂಪರ್ಕದಲ್ಲಿರುವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಸೋಮಶೇಖರ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ, ಮಾಡಾಳ್ ವಿರೂಪಾಕ್ಷಪ್ಪ, ಮಹಾಪೌರರು ಬಿ.ಜಿ.ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಸಿ ಮಮತಾ ಹೊಸ್‍ಗೌಡರ್, ಡಿಎಚ್‍ಓ ಡಾ.ರಾಘವೇಂದ್ರ ಸ್ವಾಮಿ, ಡಿಎಸ್ ಡಾ.ನಾಗರಾಜ ಮತ್ತಿತರರು ಹಾಜರಿದ್ದರು. *****************