ದೇವನಹಳ್ಳಿ: ಸರ್ಕಾರದ ಅನುದಾನವನ್ನು ಪಡೆದು ಮಹಿಳೆಯರ, ಮಕ್ಕಳ, ಹಿರಿಯ ನಾಗರೀಕರ ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ ಜಿಲ್ಲೆಯಲ್ಲಿ ದುಡಿಯುತ್ತಿರುವ ಸರ್ಕಾರೇತರ ಸಂಸ್ಥೆಗಳ ಕಾರ್ಯನಿರ್ವಹಣೆ ಕುರಿತು ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಲು ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ.ಅ.ಜೊಲ್ಲೆ ಹೇಳಿದರು.
ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಸರ್ಕಾರದಿಂದ ಮಹಿಳೆಯರ, ಮಕ್ಕಳ, ಹಿರಿಯ ನಾಗರೀಕ ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರೇತರ ಸಂಸ್ಥೆಗಳಿಗೆ ಇಲಾಖೆಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಸಾಕಷ್ಟು ಅನುದಾನವು ಬಿಡುಗಡೆ ಮಾಡಲಾಗುತ್ತಿದ್ದು, ಇದರ ಸಮರ್ಪಕ ಬಳಕೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಅಧಿಕಾರಿಗಳು ಕಚೇರಿ ಕೆಲಸದಲ್ಲೇ ನಿರತರಾಗದೆ ಹೆಚ್ಚಾಗಿ ಕ್ಷೇತ್ರ ಪ್ರವಾಸ ಕೈಗೊಳ್ಳಬೇಕು. ಸರ್ಕಾರೇತರ ಸಂಸ್ಥೆಗಳ ಮುಖೇನ ಅಥವಾ ವೈಯಕ್ತಿಕ ಸೌಲಭ್ಯ ಯೋಜನೆಯಲ್ಲಿ ಅನುದಾನ ಮತ್ತು ಸೌಲಭ್ಯ ಪಡೆದಿರುವವರ ಪ್ರಗತಿಯನ್ನು ತಿಳಿಯಲು ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಪರಿಣಿತರೊಂದಿಗೆ ಈಗಾಗಲೇ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಆಹಾರ ವಿತರಣೆಯಲ್ಲಿ ಉತ್ತಮ ರೀತಿಯಲ್ಲಿ ಮಾರ್ಪಾಡು ಮಾಡಲಾಗುವುದು.ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ, ಅಂತಹ ಕಟ್ಟಡಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ಹಾಗೆ ಅಂಗನವಾಡಿ ಕಟ್ಟಡಗಳನ್ನು ಮಾರ್ಪಡಿಸಲು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹೆಚ್ಚಿನ ಆದ್ಯತೆ ನೀಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಫೋನ್‌ಗಳನ್ನು ನೀಡಲಾಗುತ್ತಿದ್ದು, ಅಂಗನವಾಡಿಯ ಮಾಹಿತಿ ಸಂಗ್ರಹವನ್ನು ಡಿಜಿಟಲೀಕರಣಗೊಳಿಸುವ ಮೂಲಕ ಆಹಾರ ಸೋರಿಕೆಯನ್ನು ತಡೆಗಟ್ಟಲು ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ದಮನಿತ ಮಹಿಳೆಯರು, ಹೆಚ್.ಐ.ವಿ. ಸೋಂಕಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಸಾಕಷ್ಟು ಶೋಚನೀಯ ಸ್ಥಿತಿಯಲ್ಲಿದ್ದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಗೌರವಯುತ ಜೀವನ ರೂಪಿಸಿಕೊಳ್ಳಲು ಸರ್ಕಾರದಿಂದ ಸಹಾಯಸ್ತ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಕರೊನಾ ಭೀತಿಯಿಂದ ಲಾಕ್‌ಡೌನ್ ಅದ ದಿನಗಳಲ್ಲಿ ಜಿಲ್ಲೆಯಲ್ಲಿ ಒಂಭತ್ತು ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಅದರಲ್ಲಿ ಒಂದು ಪ್ರಕರಣವನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಿಸಲಾಗಿದೆ. ಬಾಲ್ಯವಿವಾಹದಿಂದಾಗುವ ಸಮಸ್ಯೆಗಳ ಕುರಿತು ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಬಾಲ್ಯವಿವಾಹ ನಿಯಂತ್ರಿಸಲು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾವಿ.ಟೆಂಗಾಳಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ,ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‌ಕುಮಾರ್ ಬಚ್ಚೇಗೌಡ,ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪಾ.ಜಿ.ರಾಯರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*****************