ದೊಡ್ಡಬಳ್ಳಾಪುರ: ಎಸ್.ಎಸ್.ಎಲ್.ಸಿ. ಪರೀಕ್ಷೆಯು ಜೂನ್ 25 ರಿಂದ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ 13252 ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ತಿಳಿಸಿದರು.
ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲ್ಲೂಕು ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು
ಕೊರೋನ ವೈರಾಣು ಸೋಂಕು ಪಸರಿಕೆಭೀತಿ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತಾ ಹಿತದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿರುವ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸಂಪೂರ್ಣವಾಗಿ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. ಕೆಮ್ಮು, ನೆಗಡಿ ಹಾಗೂ ಜ್ವರ ಲಕ್ಷಣ ಹೊಂದಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನೀಡುವ ಎನ್-95 ಮಾಸ್ಕ್ ಧರಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದರು.
ಕೊರೋನಾ ವೈರಾಣು ಸೋಂಕು ಹರಡದಂತೆ ತಡೆಯಲು, ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರತಿ ಕೊಠಡಿಗೆ ಗರಿಷ್ಟ 18 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು. ಪೆನ್, ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಬೇರೆ ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಉತ್ತಮವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿ.ಆರ್.ಪಿ.ಸಿ ಕಲಂ ಜಾರಿಮಾಡಲಾಗುವುದು ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಮಾರೇಗೌಡ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.