ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಉಚಿತ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್, ಸೋಪ್ ಮತ್ತು ಆರೋಗ್ಯ ವೃದ್ಧಿ ಪಾನೀಯ(ಜ್ಯೂಸ್) ವಿತರಣಾ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಮುಂಭಾಗ ಚಾಲನೆ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ,ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿ ಹಾಗೂ ಅವರ ಸುರಕ್ಷತೆಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್, ಸೋಪ್ ಮತ್ತು ಆರೋಗ್ಯ ವೃದ್ಧಿಯ ಪಾನೀಯ(ಜ್ಯೂಸ್) ವಿತರಿಸಲು ಮುಂದಾಗಿರುವುದು ಉತ್ತಮ ಕೆಲಸವಾಗಿದ್ದು, ಅರ್ಹ ವ್ಯಕ್ತಿಗಳಿಗೆ ಇದರ ಪ್ರಯೋಜನೆ ದೊರೆತರೆ ಯಾವುದೇ ಸೇವೆಯನ್ನು ಅಪೇಕ್ಷಿಸದೆ ದುಡಿಯುತ್ತಿರುವವರಿಗೆ ಸಲ್ಲುವ ನಿಜವಾದ ಗೌರವ ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಿಂದೆಯೂ ಉತ್ತಮ ಮತ್ತು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಿದ್ದು, ಮುಂದೆಯೂ ಸಹ ಇಂತಹ ಮತ್ತಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದರು.
ಈ ವೇಳೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಡಳಿತ ಮಂಡಳಿ ಸದಸ್ಯರಾದ ಶಿವರಾಜು ಸೇರಿದಂತೆ ಇತರರು ಇದ್ದರು.