ದೊಡ್ಡಬಳ್ಳಾಪುರ: ಎಸ್.ಎಸ್.ಎಲ್.ಸಿ. ಪರೀಕ್ಷೆಯು ಜೂನ್ 25 ರಿಂದ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಸೇರಿದಂತೆ 13,192 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿದ್ದು, ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಮೊದಲ ಬಾರಿಗೆ 12693 ವಿದ್ಯಾರ್ಥಿಗಳು ಬರೆಯಲಿದ್ದು, 294 ವಿದ್ಯಾರ್ಥಿಗಳು ಪುನರ್ ಪರೀಕ್ಷೆ ಮತ್ತು 205 ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದು ಒಟ್ಟಾರೆ 13,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14,ದೇವನಹಳ್ಳಿ ತಾಲ್ಲೂಕಿನಲ್ಲಿ 12, ಹೊಸಕೋಟೆ ತಾಲ್ಲೂಕಿನಲ್ಲಿ 12 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ಖಾಸಗಿ ಶಾಲೆಗಳಲ್ಲಿ ತೆರೆಯಲಾಗಿದೆ. ಉಳಿದಂತೆ ಪರೀಕ್ಷಾ ಕೇಂದ್ರಗಳನ್ನು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿನ ಪ್ರತಿ ಕೊಠಡಿಯಲ್ಲಿ 18 ರಿಂದ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಪರೀಕ್ಷೆಯ ಮೊದಲ ದಿನ ಪ್ರತಿ ವಿದ್ಯಾರ್ಥಿಗೆ ತಲಾ ಎರಡು ಮಾಸ್ಕ್‍ಗಳನ್ನು ಉಚಿತವಾಗಿ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕಂಟೈನ್‍ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕೆಮ್ಮು, ನೆಗಡಿ ಮತ್ತು ಜ್ವರ ಲಕ್ಷಣ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಎರಡು ವಿಶೇಷ ಕೊಠಡಿ ಮೀಸಲಿರಿಸಲಾಗಿದ್ದು, ಅಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಚೌಕ ಆಕಾರದ ಬಾಕ್ಸ್‌ಗಳನ್ನು ಗುರುತು ಮಾಡಲಾಗಿದೆ. ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
52 ಪರೀಕ್ಷಾ ಕೇಂದ್ರಗಳಿಗೆ ತಲಾ ಒಬ್ಬ ವೀಕ್ಷಕ, ಮುಖ್ಯ ಅಧೀಕ್ಷಕ, ಪ್ರಶ್ನೆ ಪತ್ರಿಕೆ ಪಾಲಕ(ಕಸ್ಟೋಡಿಯನ್), ಮೊಬೈಲ್ ಫೋನ್ ಸ್ವಾಧೀನಾಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಮುಖ್ಯೋಪಾಧ್ಯಾಯರುಗಳು ಹಾಗೂ ಹಿರಿಯ ಶಿಕ್ಷಕರನ್ನು ಸ್ಥಾನಿಕ ಜಾಗೃತ ದಳ(ಸ್ಕ್ವಾಡ್)ದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕರೊನಾ ವೈರಾಣು ಸೋಂಕು ಪಸರಿಕೆ ಭೀತಿ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತಾ ಹಿತದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿರುವ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸಂಪೂರ್ಣವಾಗಿ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪೆನ್, ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಬೇರೆ ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ. ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುವುದು.
ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ಸೌಲಭ್ಯ ಇಲ್ಲದಿರುವ ಪ್ರದೇಶಗಳಿಗೆ ಒಪ್ಪಂದದ ಮೇರೆಗೆ 14 ಕೆ.ಎಸ್.ಆರ್.ಟಿ.ಸಿ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿ.ಆರ್.ಪಿ.ಸಿ ಕಲಂ ಜಾರಿಮಾಡಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.