ದೊಡ್ಡಬಳ್ಳಾಪುರ: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ ರೂ.78 ಕೋಟಿ ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಿ ಅವರು ಮಾತನಾಡಿದರು.
ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸುವುದರೊಂದಿಗೆ ಆರೋಗ್ಯ, ಘನತ್ಯಾಜ್ಯ ವಿಲೇವಾರಿ, ಇನ್ನಿತರ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಶ್ರೀ ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ, ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಶ್ರೀ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಘನ ಉಪಸ್ಥಿತಿಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿಗಳಾದ ಗೋವಿಂದ.ಎಂ.ಕಾರಜೋಳ, ಲಕ್ಷ್ಮಣ್ ಸಂಗಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಚಿವರುಗಳಾದ ಕೆ.ಗೋಪಾಲಯ್ಯ, ಬಿ.ಎ ಬಸವರಾಜು(ಬೈರತಿ), ಕೆ.ಸಿ.ನಾರಾಯಣಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಹಾಪೌರ ಎಂ.ಗೌತಮ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಸಂಸದರುಗಳಾದ ಬಿ.ಎನ್.ಬಚ್ಚೇಗೌಡ, ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ, ಶಾಸಕರುಗಳಾದ ಡಿ.ಕೆ.ಶಿವಕುಮಾರ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಟಿ.ವೆಂಕಟರಮಣಯ್ಯ, ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಎಸ್.ರವಿ, ಪುಟ್ಟಣ್ಣ, ಅ.ದೇವೇಗೌಡ, ಸಿನೆಮಾ ನಟರಾದ ಪುನೀತ್ ರಾಜ್‌ಕುಮಾರ್, ಜಗ್ಗೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ..ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಮತ್ತಿತ್ತರರು ಉಪಸ್ಥಿತರಿದ್ದರು.