ದೊಡ್ಡಬಳ್ಳಾಪುರ: ಕರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರ ವ್ಯಾಪ್ತಿಯಲ್ಲಿ ಜೂನ್ 29 ರಿಂದ ಮುಂದಿನ ಆದೇಶದವರಿಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಷೇಧಾಜ್ಞೆ ಉಲ್ಲಂಘಿಸಿ ಜನರು ಓಡಾಡುತ್ತಿರುವುದು ಕಂಡುಬಂದಿದ್ದು ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ತಿಳಿಸಿದರು.
ಹೊಸಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಿಷೇಧಾಜ್ಞೆಯ ಉಲ್ಲಂಘನೆ ಮುಂದುವರಿದರೆ, ಇನ್ನೂ ಕಠಿಣ ಕ್ರಮ ಜಾರಿಗೊಳಿಸಲು, ಸರ್ಕಾರಕ್ಕೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ಶಿಫಾರಸ್ಸು ಮಾಡಲಾಗುವುದು ಎಂದರು.
ಹೊಸಕೋಟೆ ನಗರ ವ್ಯಾಪ್ತಿಯಲ್ಲಿ, ಸಿ.ಆರ್.ಪಿ.ಸಿ. 1973ರ ಕಲಂ 144(3)ರ ಮೇರೆಗೆ, ಜೂನ್ 29 ರಿಂದ ಮುಂದಿನ ಆದೇಶದವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ, ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾಕೂಟ ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳು, ಹೆಚ್ಚು ಜನರು ಗುಂಪು ಸೇರುವುದು, ಬೇಸಿಗೆ ಶಿಬಿರ, ಪ್ರವಾಸ ಸ್ನೇಹ ಸಮ್ಮೇಳನ, ಸಂಗೀತ ಸಮ್ಮೇಳನ, ನಾಟಕೋತ್ಸವ, ವಿಚಾರ ಗೋಷ್ಠಿ ಮುಂತಾದವುಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ದಿನನಿತ್ಯ ಬಳಕೆ ಮಾಡುವಂತಹ ವಸ್ತುಗಳು ಹಾಗೂ ತರಕಾರಿ ಮಾರುಕಟ್ಟೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಆದರೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಸುವುದು ಕಡ್ಡಾಯಗೊಳಿಸಲಾಗಿದೆ. ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಹೊಸಕೋಟೆ ನಗರ ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚು ಜನರಲ್ಲಿ ಕೊರೋನಾ ವೈರಾಣು ಸೋಂಕು ದೃಢಪಟ್ಟಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಷ್ಟು ಸೋಂಕು ಹರಡುವ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದರೂ ಸಹ ಕೆಲವರು, ಸಾಮಾಜಿಕ ಜವಾಬ್ದಾರಿ ಮರೆತು, ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡುತ್ತಿರುವುದು ತಮಗೆ ತಾವೇ ಮಾಡಿಕೊಳ್ಳುತ್ತಿರುವ ದ್ರೋಹವಾಗಿದೆ. ಅರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು. ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಸಕಾರಾತ್ಮಕ ಸ್ಪಂದನೆ ಅಗತ್ಯವಾಗಿದೆ ಎಂದು ತಿಳಿಸಿದರು.
ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ಗೀತಾ, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.