ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕಿತ ವ್ಯಕ್ತಿಗಳು ತಮ್ಮ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮಾಹಿತಿಯನ್ನು ನೀಡಲು ಮೂಲಕ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ. ನಾಯಕ್ ಸೂಚಿಸಿದರು.
ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕರೊನಾ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವ ಸೋಂಕಿತ ವ್ಯಕ್ತಿ, ಮಾಹಿತಿಯನ್ನು ನೀಡುವುದಿಲ್ಲವೊ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡುವ ಮೂಲಕ ಸೋಂಕು ಬೇರೆಯವರಿಗೆ ಹರಡದಂತೆ ಕ್ರಮ ವಹಿಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಕರೊನಾ ವೈರಾಣು ಹರಡುವಿಕೆಯ ಪ್ರಮಾಣ ತೀವ್ರಗತಿಯಲ್ಲಿರುವ ಕಾರಣದಿಂದ ಕೊರೋನ ಸೋಂಕು ಪತ್ತೆಯಾದ ಸ್ಥಳವನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಿ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಎಂದು ಪರಿಗಣಿಸಿ ಅಂತರವನ್ನು ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಂಡುಬರುವ ಕರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು
ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕಿತ ವ್ಯಕ್ತಿಗಳು ಹೋಮ್ ಕ್ವಾರಂಟೈನ್ ಉಲ್ಲಂಘನೆ ಮಾಡಿದವರಿಗೆ ಮೊದಲು ಎಚ್ಚರಿಕೆ ನೀಡಿ ಆ ನಂತರ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇವೆ ಅಗತ್ಯವಾಗಿರುವುದರಿಂದ ಇಂತಹ ಸಮಯದಲ್ಲಿ ತುಂಬಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ , ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.