ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಗಮವಾಗಿ ಮುಕ್ತಾಯವಾಯಿತು. ಮತ್ತೊಂದಡೆ ಜು.10 ರಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಿಲ್ಲಿಸಿ, ಶುಕ್ರವಾರದಂದು ಸಿಇಟಿ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದ್ದ ದೃಶ್ಯ ಸಹ ಕಂಡು ಬಂತು.
ದೊಡ್ಡ್ಡಬಳ್ಳಾಪುರ ತಾಲೂಕಿನ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಶ್ರೀದೇವರಾಜ ಅರಸು ಪದವಿ ಪೂರ್ವ ಕಾಲೇಜು,ಸರಕಾರಿ ಪದವಿ ಪೂರ್ವ ಕಾಲೇಜು, ಹೊಸಕೋಟೆ ತಾಲೂಕಿನ ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ನೆಲಮಂಗಲ ತಾಲೂಕಿನ ಬಸವೇಶ್ವರ ಬಾಲಕಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಶುಕ್ರವಾರ ನಡೆದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಸಿಇಟಿ ಪರೀಕ್ಷೆಗೆ 1676 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಮತ್ತು 102 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ 3 ಮಂದಿ ಕೋವಿಡ್ ವಿದ್ಯಾರ್ಥಿಗಳು ಶುಕ್ರವಾರ ಸಹ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ಬರೆದಿದ್ದಾರೆ. ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಸೇರಿದಂತೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದರು.
ಆಶಾ ಕಾರ್ಯಕರ್ತೆಯರಿಗೆ ಆಶ್ವಾಸನೆ :
ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 12 ಸಾವಿರ ರೂ.ಗೌರವಧನ ನೀಡಬೇಕು.ಕರೊನ ಸೋಂಕು ನಿಯಂತ್ರಿಸುವ ಕಾರ್ಯಕ್ರಮದಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿ ನೀಡಬೇಕು. ಕರೊನಾ ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಮತ್ತು ಸಂಪೂರ್ಣ ಚಿಕಿತ್ಸಾ ವೆಚ್ಚ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಜು.10 ರಿಂದ ನಿರಂತರವಾಗಿ 20 ದಿನಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಆರೋಗ್ಯ ಸಚಿವರು ಮತ್ತು ಅಧಿಕಾರಿಗಳು ನೀಡಿರುವ ಭರವಸೆಯಂತೆ ನಾವು ಪ್ರತಿಭಟನೆ ನಿಲ್ಲಿಸಿ ಆಶಾ ಕಾರ್ಯಕರ್ತೆಯರು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಶಾ ಕಾರ್ಯಕರ್ತೆಯ ಎಐಯುಟಿಯುಸಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ರಮಾ ತಿಳಿಸಿದರು.ಪ್ರತಿಭಟನೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,ಕರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿರುವ ಕೆಲಸ ಎಷ್ಟೊಂದು ಜವಾಬ್ದಾರಿಯುತವಾಗಿದೆ ಎಂಬುದು ಜನರಿಗೆ ಮತ್ತು ಸರಕಾರಕ್ಕೆ ಮನವರಿಕೆಯಾಗಿದೆ.ಕರೊನಾ ಆತಂಕದ ಈ ಸಂದರ್ಭದಲ್ಲಿ ಅಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿರುವ ಜವಾಬ್ದಾರಿಯ ಬಗ್ಗೆ ಜನರು ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಜನರು ಮತ್ತು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯತೆ ಹೊಂದಿರುವ ಆಶಾ ಕಾರ್ಯಕರ್ತೆಯರಿಗೂ ಹಲವು ಸಮಸ್ಯೆಗಳಿವೆ. ಸರಕಾರ ನೀಡುತ್ತಿರುವ ವೇತನವನ್ನು ಸಕಾಲದಲ್ಲಿ ನೀಡಬೇಕೆಂದು ಆಶಾ ಕಾರ್ಯಕರ್ತೆಯರ ದೊರೆಯಬೇಕಾಗಿದ. ಜನರಿಗೆ ಅಗತ್ಯ ಸೇವೆ ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರ ಕೆಲಸವನ್ನು ಖಾಯಂಗೊಳಿಸುವುದರೊಂದಿಗೆ ವೇತನವನ್ನು ಹೆಚ್ಚಿಸಬೇಕಾಗಿದೆ ಎಂದರು.