ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2020-21 ನೇ ಸಾಲಿನ “ವಿಕಲಚೇತನರಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ” ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿ ವೇತನ” ಹಾಗೂ ತತ್ಸಮಾನ ವರ್ಷದ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಕಲಚೇತನ ವಿದ್ಯಾರ್ಥಿಗಳಿಗೆ “ಪ್ರೋತ್ಸಾಹಧನ”ಕ್ಕಾಗಿ ಅರ್ಹ ಬೆಂಗಳೂರು ಗ್ರಾಮಾಂತರ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ., ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ. ಹಾಗೂ ಜಿಲ್ಲಾ ಕಛೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಸಲ್ಲಿಸಬಹುದಾಗಿದೆ.
ವ್ಯಾಸಂಗ ಮಾಡುತ್ತಿರುವ ಶಾಲೆ/ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ದೃಢೀಕರಿಸಿದ ಅರ್ಜಿ ನಮೂನೆ, ವಿಕಲಚೇತನರ ವೈದ್ಯಕೀಯ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ತರಗತಿಯಲ್ಲಿ ಉತ್ತೀರ್ಣಗೊಂಡ ಅಂಕಪಟ್ಟಿ, ಫಲಾನುಭವಿಯ ಆಧಾರ್ ಕಾರ್ಡ್ ಜೋಡಣೆಯಾಗಿರುವ ಬ್ಯಾಂಕ್ ಪಾಸ್‍ಬುಕ್ ನಕಲು ಪ್ರತಿ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 03, ನೆಲಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಸಹಾಯವಾಣಿ ದೂ.ಸಂ.: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.