ಮಡಿಕೇರಿ: ತಲಕಾವೇರಿ ಬಳಿಯ ಗಜಗಿರಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಡಿವೈಎಸ್‍ಪಿ ದಿನೇಶ್ ಕುಮಾರ್ ಅವರಿಂದ ಕಾರ್ಯಾಚರಣೆ ಸಂಬಂಧ ಮಾಹಿತಿ ಪಡೆದರು.
ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಕ್ಲಿಷ್ಟ ಪರಿಸ್ಥಿತಿಯ ವಾತಾವರಣದಲ್ಲಿಯೂ ಸಹ ಕಾರ್ಯಾಚರಣೆ ಮುಂದುವರೆಸಲಾಗಿದೆ. ಕಣ್ಮರೆಯಾಗಿರುವವರು ಪತ್ತೆಯಾಗುವವರೆಗೆ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಚಿವರು ಹೇಳಿದರು.
ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ ಮೋಡ, ಮಂಜು ಕವಿದ ವಾತಾವರಣದಲ್ಲಿಯೂ ಸಹ ಎನ್‍ಡಿಆರ್‍ಎಫ್ ಎಸ್‍ಡಿಆರ್‍ಎಫ್, ಅರಣ್ಯ, ಅಗ್ನಿ ಶಾಮಕ, ಗೃಹ ರಕ್ಷಕದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ,ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಇತರರು ಇದ್ದರು.