ದೊಡ್ಡಬಳ್ಳಾಪುರ: ಕರೊನಾ ಮಹಾಮಾರಿಯ ಜೊತೆ ಜೊತೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಸಾಧಿಸಿ ಎಂದರಲ್ಲದೆ, ಯೋಜನೆಗಳಡಿ ಬಿಡುಗಡೆಯಾಗುವ ಅನುದಾನವನ್ನು ಆದ್ಯತೆಗೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸಿ, ಖರ್ಚು ಮಾಡುವಂತೆ ಸೂಚಿಸಿದರು.
ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಅವುಗಳನ್ನು ದುರಸ್ತಿ ಕಾರ್ಯ ಮಾಡಲು ಹಾಗೂ ಅವಶ್ಯಕ ಕಾಮಗಾರಿಗಳನ್ನು ಗುರುತಿಸಿ ಇಲಾಖೆಗೆ ನಿಗದಿಯಾಗಿರುವ ಅನುದಾನವನ್ನು ಆದ್ಯತೆ ಮೇರೆಗೆ ವಿನಿಯೋಗಿಸುವಂತೆ ಆರ್.ಡಿ.ಪಿ.ಆರ್. ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮ ಯೋಜನೆಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿ, ಫಲಾನುಭವಿಗಳ ಆಯ್ಕೆ ಕುರಿತ ಅಗತ್ಯದ ಅನುಮೋದನೆಯನ್ನು ಪಡೆದುಕೊಂಡು ಶೇ.50 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಎಂದು ತಿಳಿಸಿದರು.
ಪ್ರಸಕ್ತ ಸಾಲಿನ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕೆಂದರಲ್ಲದೆ, ಫಲಾನುಭವಿಗಳ ಆಯ್ಕೆ ಸಮಯದಲ್ಲಿ ಅರ್ಹರಿಗೆ ಯೋಜನೆ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದರು. ಇಲಾಖಾವಾರು ಪ್ರತ್ಯೇಕವಾಗಿ ಮಾಹಿತಿ ಪಡೆದು
ಸಂಬಂಧಿಸಿದ ಅಧಿಕಾರಿಗಳು ಪ್ರತಿ ಮಾಹೆ ಜರುಗುವ ಸಭೆಗೆ ಕಡ್ಡಾಯವಾಗಿ ಪೂರ್ಣ ಮಾಹಿತಿಯೊಂದಿಗೆ ಹಾಜರಾಗುವಂತೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಪ.ಜಿ.ರಾಯ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.