ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಸೆ.7 ರಿಂದ 18 ರ ತನಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2465 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕುರಿತು ಮಾತನಾಡಿದ ಅವರು, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಮತ್ತು ದೇವನಹಳ್ಳಿ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ದೊಡ್ಡಬಳ್ಳಾಪುರದಲ್ಲಿ 680, ದೇವನಹಳ್ಳಿಯಲ್ಲಿ 445, ನೆಲಮಂಗಲದಲ್ಲಿ 660 ಮತ್ತು ಹೊಸಕೋಟೆಯಲ್ಲಿ 640 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪರೀಕ್ಷೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಡೆಸುವುದಕ್ಕಾಗಿ ಹಲವಾರು ಅಧಿಕಾರಿಗಳ ತಂಡಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ರಚಿಸಿದೆ. ಜಿಲ್ಲಾ ಮಟ್ಟದಲ್ಲಿ ಜಾಗೃತ ದಳ ತಂಡ ರಚನೆಯಾಗಿದೆ. ಜಾಗೃತ ತಂಡ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶ ನಿಷೇಧಿ ಪ್ರದೇಶವೆಂದು ಘೋಷಿಸಿದೆ. ಪರೀಕ್ಷಾ ಕೇಂದ್ರ ಸಮೀಪ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದರು.
ಕೋವಿಡ್ ಗಮನದಲ್ಲಿಟ್ಟುಕೊಂಡು ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೈದ್ಯಕೀಯ ನೆರವಿನ ವ್ಯವಸ್ಥೆ ಇರುತ್ತದೆ. ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಕೋಠಡಿಗಳಿಗೆ ಮತ್ತು ಕಾಲೇಜಿನ ಆವರಣದಲ್ಲೂ ಶುಚ್ಫಿತ್ವಕ್ಕಾಗಿ ಸ್ಯಾನಿಟೈಜರ್ ಸಿಂಪಾಡಿಸಲಾಗುತ್ತಿದೆ. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಅಳೆಯಲಾಗುತ್ತದೆ. ಅನಾರೋಗ್ಯದ ಲಕ್ಷಣ ಕಂಡ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರದೊಂದಿಗೆ ಪರೀಕ್ಷೆ ಬರೆಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸೆ.7 ರಿಂದ ಪೂರಕ ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)