ದೊಡ್ಡಬಳ್ಳಾಪುರ: ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್ ನೀಡಲು ಸರಕಾರಕ್ಕೆ ಒತ್ತಾಯ ಮಾಡಲಾಗಿದೆ. ಶಿಕ್ಷಣ ಸಚಿವರುಗಳು ಸಹ ವಿಶೇಷ ಪ್ಯಾಕೇಜ್ ನೀಡುವ ಸಂಬಂಧ ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಪುಟ್ಟಣ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಪದವಿ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರು ಹಾಗೂ ವಿವಿಧ ಶಿಕ್ಷಕರ ಸಂಘಗಳು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಕೋವಿಡ್ ವಿಶೇಷ ಪ್ಯಾಕೇಜ್ ನೀಡುವಂತೆ ಮಾಡಿರುವ ಮನವಿ ಸರಕಾರ ಸ್ಪಂದಿಸಿದೆ.ಈ ಸಂಬಂಧ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದೆ. ಶಿಕ್ಷಕರ ವೃತ್ತ ಗೌರವವನ್ನು ಉಳಿಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ತನಕ ಕಾರ್ಯನಿರ್ವಹಿಸುತ್ತಿರು ಶಿಕ್ಷಕರು ಮತ್ತು ಉಪನ್ಯಾಸಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಈ ಸಮಸ್ಯೆಗಳನ್ನು ನಿವಾರಿಸಲು ನಿರಂತರವಾಗಿ ಹೋರಾಟ ಮಾಡುತ್ತಿರುವ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಟನೆಗಳ ಶ್ರಮ ಮಹತ್ವದಾಗಿದೆ. ಸರಕಾರ ಯಾವುದೇ ಪಕ್ಷ ನಡೆಸಿದರು,ಶಿಕ್ಷಕರ ಕ್ಷೇತ್ರದ ಜನಪ್ರನಿಧಿಗಳು ಶಿಕ್ಷಕರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿದ್ದಾರೆ. ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ತಾರತಮ್ಯ,ಬಡ್ತಿ ಶಿಕ್ಷಕರ ವೇತನ,ಶಿಕ್ಷಕರ ಸ್ನೇಹಿ ವರ್ಗಾವಣೆ ನೀತಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಹೆಚ್ಚುವರಿ ಸಮಸ್ಯೆ,ಅನುದಾನರಹಿತ ಶಿಕ್ಷಕರಿಗೆ ಪಿಎಫ್ ಮತ್ತು ಚೆಕ್ ಮೂಲಕ ವೇತನ ಬಿಡುಗಡೆ ಮುಂತಾದ ಹಲವಾರು ಸಮಸ್ಯೆಗಳನ್ನು ಸದನ ಒಳಗೆ ಮತ್ತು ಹೊರಗೆ ಹೋರಾಟ ಮಾಡಿ ಸಮಸ್ಯೆಗಳಿಗೆ ಪರಿಹಾರವನ್ನು ಸರಕಾರ ನೀಡುವಂತೆ ಮಾಡಲಾಗಿದೆ. ಶಿಕ್ಷಕರ ಮತ್ತು ಉಪನ್ಯಾಸಕರ ಇನ್ನು ಹಲವಾರು ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ. ಇದಕ್ಕಾಗಿ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ ಎಂದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ.ಮಂಜುನಾಥ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆಯ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಕರ್ತವ್ಯ ನಿಯೋಜನೆ ಮಾಡಲಾಗಿತ್ತು. ಈ ನಿಯೋಜನೆ ವಿರುದ್ದ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ ಹೋರಾಟ ಮಾಡಿ ನಿಯೋಜನೆ ರದ್ದುಗೊಳಿಸಿದರು. ಶಿಕ್ಷಕರ ಮತ್ತು ಉಪನ್ಯಾಸಕರ ಯಾವುದೇ ಸಮಸ್ಯೆಯನ್ನು ಬಗೆಹರಿಸಲು ಪುಟ್ಟಣ್ಣ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಶಿಕ್ಷಕರ ಸ್ಮೇಹಿ ಜನಪ್ರತಿನಿಧಿಗಳಿಂದ ಶಿಕ್ಷಕರ ಇನ್ನು ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಬಡ್ತಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಲ್ಲಪ್ಪಗೌಡ ಮಾತನಾಡಿ, ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮತ್ತು ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಬಡ್ತಿ ಪಡೆದಿರುವ ಸಹ ಶಿಕ್ಷಕರು ಮತ್ತು ಉಪನ್ಯಾಸಕರು ಇಂದು ಕಡಿಮೆ ಸಂಬಳ ಪಡೆಯುವಂತಾಗಿದೆ. ೬ನೇ ವೇತನ ಆಯೋಗದಲ್ಲಿ ಬಡ್ತಿ ಶಿಕ್ಷಕರಿಗೆ ಅಗಿರುವ ವೇತನ ತಾರತಮ್ಯವನ್ನು ನಿವಾರಿಸಲು ಆಗಿರುವ ಶಿಫಾರಸ್ಸು ಇನ್ನು ಜಾರಿಗೆ ಬಂದಿಲ್ಲ. ಈ ಸಂಬಂಧ ಹೋರಾಟವನ್ನು ಮಾಡಲಾಗುತ್ತಿದೆ. ಈಗ ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದರೆ ಶಿಕ್ಷಕರ ಸಮಸ್ಯೆಗಳು ಮಾತ್ರ ನಿರಂತರವಾಗಿ ಮುಂದುವರಿಯುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎ.ಸುಬ್ರಮಣಿ, ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಿಪತಿ, ದೊಡ್ಡಬಳ್ಳಾಪುರ ತಾಲೂಕಿನ ಸರಕಾರಿ, ಖಾಸಗಿ ಅನುದಾನಿತ, ಖಾಸಗಿ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.
