ದೊಡ್ಡಬಳ್ಳಾಪುರ: ಕೋವಿಡ್ 19 ಹಿನ್ನಲೆ ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ

ಜಗಿದು, ಉಗಿಯುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಹಾರ ಭದ್ರತಾ ಕಾಯ್ದೆಯನ್ನು ಉಲ್ಲಂಘಿಸುವ ಹೋಟೆಲ್ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದರಲ್ಲದೆ, 2003 ರ ಕೋಟ್ಪಾ ಕಾಯಿದೆಯಡಿಯಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಗಜ ಅಂತರದಲ್ಲಿ ಧೂಮಪಾನ ಮಾಡುವುದು, ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದರಲ್ಲದೆ, ಶಾಲಾ-ಕಾಲೇಜು ಮಕ್ಕಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್ ಮಸಾಲಾ ಜಗಿಯುವವರ ವಿರುದ್ಧ ಆರೋಗ್ಯ ಇಲಾಖೆಯವರು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸುವುದರಂದಿಗೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಕೈಗಾರಿಕಾ ಪ್ರದೇಶಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲಾ-ಕಾಲೇಜು ಆವರಣಗಳು ಮತ್ತು ಸರ್ಕಾರಿ ಕಚೇರಿ ಆವರಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಉಲ್ಲಂಘನೆ ಮಾಡುವವರಿಗೆ ಕಡ್ಡಾಯವಾಗಿ ದಂಡ ವಿಧಿಸಬೇಕೆಂದು ಹೇಳಿದರು.
ಧೂಮಪಾನ ಮಾಡುವುದರಿಂದ, ತಂಬಾಕು ಸೇವನೆಯಿಂದಾಗಿ ಉಂಟಾಗುವ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ, ಶ್ವಾಸ ಸಂಬಂಧಿ ಇತ್ಯಾದಿ ಮಾರಾಣಾಂತಿಕ ಖಾಯಿಲೆಗಳು, ಗರ್ಭಪಾತ, ಗರ್ಭದಾರಣೆಯಲ್ಲಿ ಕುಂಠಿತ, ತಂಬಾಕು ಸೇವನೆಯಿಂದ ದಂತಕ್ಷಯ ರೋಗ ಸೇರಿದಂತೆ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವ ಶಿಬಿರಗಳನ್ನು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ
ಆಯೋಜಿಸಬೇಕು ಎಂದು ತಿಳಿಸಿದರಲ್ಲದೆ, ತಾಲ್ಲೂಕು ಆರೋಗ್ಯಾಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ತಂಬಾಕು ಸೇವನೆ ತ್ಯಜಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಮನವೊಲಿಸುವಂತೆ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ ಅವರು ಮಾತನಾಡಿ ಕಳೆದ ವರ್ಷ ತಂಬಾಕು ನಿಯಂತ್ರಣ ಘಟಕದ ಕಾರ್ಯಾಚರಣೆಯಲ್ಲಿ 520 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, 85,200 ರೂ. ದಂಡ ಸಂಗ್ರಹಿಸಲಾಗಿದೆ ಎಂದರಲ್ಲದೆ, 1156 ಜನರು ಚಿಕಿತ್ಸೆಗೆ ನೋಂದಣಿಯಾಗಿದ್ದು, ಇದರಲ್ಲಿ 44 ಜನರು ಸಂಪೂರ್ಣವಾಗಿ ತಂಬಾಕು ಚಟದಿಂದ ಮುಕ್ತರಾಗಿದ್ದಾರೆಂದರು ಹಾಗೂ ಗುಲಾಬಿ ಚಳುವಳಿ (ರೋಸ್ ಕ್ಯಾಂಪೇನ್) ಕಾರ್ಯಕ್ರಮದ ಮೂಲಕ ತಂಬಾಕು ಸೇವನೆಯ ದುಷ್ಪರಿಣಾಮ, ನಿಯಂತ್ರಣದ ಕುರಿತು ಅರಿವು ಮೂಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
