ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಕರೊನಾ ವೈರಸ್ ಹರಡುವಿಕೆ ಹಾಗೂ ಅದರ ನಿಯಂತ್ರಿಸುವಿಕೆ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಕರೊನಾ ವೈರಸ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಮೂರ್ನಾಲ್ಕು ದಿನಗಳಲ್ಲಿ ಕ್ರಿಯಾ ಯೋಜನೆ ರೂಪಿಸಬೇಕೆಂದರಲ್ಲದೆ, ಕೊರೋನ ಸೋಂಕಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಲಾಖೆಗಳು ಬಳಸುವ ಲೆಟರ್‌ಹೆಡ್‌ಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು, ಶುಚಿತ್ವ ಕಾಪಾಡುವುದು ಇಂತಹ ಜಾಗೃತಿ ಬರಹಗಳನ್ನು ಬಳಸುವ ಮೂಲಕ ಕರೊನಾ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು.
ಪ್ರಸ್ತುತ ಕರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ ಎಂದರಲ್ಲದೆ, ಎಲ್ಲರೂ
ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಂತಿಲ್ಲ, ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಹೇಳಿದರು.
ಕರೊನ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲು ತಹಸೀಲ್ದಾರ್‌ಗಳಿಗೆ ಅದೇಶಿದರಲ್ಲದೆ, ಕರೊನ ಪರೀಕ್ಷೆ ಒಳಗಾಗಲು ನಿರಾಕರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದರು.
ಸಾರ್ವಜನಿಕರು ಸಣ್ಣ ಪ್ರಮಾಣದ ನೆಗಡಿ,ಕೆಮ್ಮು, ಜ್ವರ ಕಾಣಿಸಿಕೊಂಡ ಕೂಡಲೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಬೇಕೆಂದರಲ್ಲದೆ, ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕೆಮ್ಮುವಾಗ, ಸೀನುವಾಗ ಕೈವಸ್ತ್ರ ಬಳಸಬೇಕು. ಒಂದು ವೇಳೆ ಕರೊನಾ ವೈರಸ್ ಸಂಬಂಧಿತ ಸೋಂಕು ಎಂದು ಅನುಮಾನ ಬಂದರೆ ಸ್ವಯಂ ಚಿಕಿತ್ಸೆಗೆ ಮುಂದಾಗಿ, ಕೂಡಲೇ ತಮ್ಮ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ, ಕರೊನಾ ಪರೀಕ್ಷೆಗೆ ಒಳಗಾಗಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ||ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ||ಮಂಜುಳಾದೇವಿ, ವಾರ್ತಾ ಮತ್ತು
ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

