ದೊಡ್ಡಬಳ್ಳಾಪುರ: ಕೋವಿಡ್-19 ಕುರಿತು ಜಾಗ್ರತೆ ವಹಿಸುವುದರೊಂದಿಗೆ ಇತರೆ ಸಾಮಾನ್ಯ ಖಾಯಿಲೆಗಳ ಬಗ್ಗೆಯೂ ನಿರ್ಲಕ್ಷ್ಯವಹಿಸಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕೋಶದ ವತಿಯಿಂದ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿಂದು ಏರ್ಪಡಿಸಲಾಗಿದ್ದ “ಸದೃಢ ಆರೋಗ್ಯ ಕಾರ್ಯಕರ್ತ ಆಂದೋಲನ(ಫಿಟ್ ಹೆಲ್ತ್ ವರ್ಕರ್ ಕ್ಯಾಂಪೇನ್)” ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ವೈದ್ಯರು, ಆರೋಗ್ಯ ಕಾರ್ಯಕರ್ತರು, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಆಶಾ ಕಾರ್ಯಕರ್ತರಿಗೆ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ, ಸಾಮಾನ್ಯ ಕ್ಯಾನ್ಸರ್‍ಗಳಾದ ಬಾಯಿ-ಗಂಟಲು ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‍ಗಳ ಬಗ್ಗೆ ಪೂರ್ವಭಾವಿ ತಪಾಸಣೆ ಕೈಗೊಳ್ಳಿ ಎಂದರಲ್ಲದೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೂರ್ವಭಾವಿ ತಪಾಸಣೆಗೆ ಪರಿಗಣಿಸಬೇಕು ಎಂದು ಸೂಚಿಸಿದರು.
ಪ್ರಸ್ತುತ, ಕೋವಿಡ್-19 ಸಾಂಕ್ರಾಮಿಕತೆಯ ಸಂದರ್ಭವಾದ್ದರಿಂದ ಮಾರ್ಗಸೂಚಿ ಅನುಸಾರವಾಗಿ ಪ್ರಾಥಮಿಕ/ಸಮುದಾಯ ಆರೋಗ್ಯ ಕೇಂದ್ರ, ಉಪ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯಶಸ್ವಿಗೊಳಿಸಿ ಎಂದರಲ್ಲದೆ, ಕಾರ್ಯಕ್ರಮ ಪೂರ್ಣಗೊಂಡ ನಂತರ ಅತ್ಯುತ್ತಮ ದೃಢತೆ ಹೊಂದಿರುವವರನ್ನು ಪುರಸ್ಕರಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

