ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾರ್ಯಗಳಿಗಾಗಿಯೇ ಸಾಕಷ್ಟು ಅನುದಾನವನ್ನು ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮೀಸಲಿಡಲಾಗಿದ್ದು, ಸಮರ್ಪಕವಾಗಿ ಅನುದಾನವನ್ನು ಬಳಕೆ ಮಾಡುವ ಮೂಲಕ ದುರ್ಬಲ ವರ್ಗದವರ ಧ್ವನಿಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಪೂರ್ಣವಾಗಿ ಸಾಧಿಸಬೇಕು ಎಂದರಲ್ಲದೆ, ಈಗಾಗಲೇ ಬಿಡುಗಡೆಯಾಗಿರುವ ಅನುದಾನವನ್ನು ಅಭಿವೃದ್ಧಿ ಯೋಜನೆಗಳಿಗೆ ವ್ಯವಸ್ಥಿತವಾಗಿ, ಕ್ರಮಬದ್ಧವಾಗಿ ಶೇಕಡಾ ನೂರರಷ್ಟ್ಟು ವ್ಯಯಿಸಲು ಸೂಚಿಸಿದರು.
ಕೃಷಿ ಯಾಂತ್ರೀಕರಣ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ವಂತಿಕೆ(RTGS) ಸಲ್ಲಿಸುವಂತೆ ಉತ್ತೇಜಿಸಿ, ಯೋಜನೆಯ ಉಪಯೋಗ ಪಡೆಯುವಂತೆ ಮನವರಿಕೆ ಮಾಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಬಾಕಿ ಉಳಿದಿರುವ 2018-19 ನೇ ಸಾಲಿನ ಪಡಿತರ ಚೀಟಿ ವಿತರಣೆ ಕಾರ್ಯವನ್ನು ತ್ವರಿತವಾಗಿ ಪೂರೈಸುವಂತೆ ತಿಳಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ವಿವಿಧ ಯೋಜನೆಗಳ ಫಲಾನುಭವಿಗಳ ಬದುಕು ಸಕಾರಾತ್ಮಕವಾಗಿ ಬದಲಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡು, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪ.ಜಿ.ರಾಯ್ಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

