ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಸಂಬಂಧ 01.01.2003ರ ಅರ್ಹತಾ ದಿನಾಂಕದಂತೆ 01.01.2021ಕ್ಕೆ 18 ವರ್ಷ ತುಂಬುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಮತದಾರರ ನೋಂದಣಿಗೆ ಅಗತ್ಯ ಕ್ರಮ ವಹಿಸಿ ಎಂದು ಸಕಾಲ ಮಿಷನ್‌ನ ಅಪರ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ(Roll Observer) ಡಾ.ಬಿ.ಆರ್.ಮಮತಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸುವಿಕೆ ಹಾಗೂ ಸಂಬಂಧಿತ ಕಾರ್ಯಗಳ ಕುರಿತ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
18 ವರ್ಷ ಪೂರೈಸಿರುವ ಯುವ ಮತದಾರರ ನೋಂದಣಿ ನಮ್ಮ ಗುರಿಯಾಗಿದ್ದು, ಕಾಲೇಜಿನ ಪ್ರಾಂಶುಪಾಲರೊಂದಿಗೆ ಮಾತನಾಡಿ, ಹೊಸದಾಗಿ ಮತದಾರರ ಪಟ್ಟಿಗೆ ಸೇರಬೇಕಿರುವ ಪಿ.ಯು.ಸಿ. ದ್ವಿತೀಯ ವರ್ಷ ಹಾಗೂ ಪದವಿ ಪ್ರಥಮ ವರ್ಷ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ನೋಂದಣಿ ಮಾಡಿಸಲು ನಮೂನೆ-6ರ ಅರ್ಜಿಯನ್ನು ಭರ್ತಿ ಮಾಡಿ, ಸಲ್ಲಿಸಲು ತಿಳಿಸಿ ಎಂದರಲ್ಲದೆ, ಮತದಾರರ ಪಟ್ಟಿಗೆ ಹೊಸದಾಗಿ ಸೇರಿಸುವ ಹಾಗೂ ಹೆಸರು ತೆಗೆದು ಹಾಕಬೇಕಿರುವುದರ ಎಚ್ಚರಿಕೆವಹಿಸಿ ಕಾರ್ಯವಹಿಸಿ ಎಂದರು.
ನೆಲಮಂಗಲ ತಾಲ್ಲೂಕಿನಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಸಲ್ಲಿಸುವ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ, ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರಲ್ಲದೆ, ಕೋವಿಡ್-19 ಹಿನ್ನೆಲೆ ವಲಸೆ ಹೋಗುವವರು ಹೆಚ್ಚಾಗಿರುವ ಕಾರಣ ಸೂಕ್ತ ಪರಿಶೀಲನೆಯೊಂದಿಗೆ ಮತದಾರರ ನೋಂದಣಿಗೆ ಕ್ರಮವಹಿಸಿ ಎಂದು ತಿಳಿಸಿದರು.
ಕೋವಿಡ್-19 ಕಾರಣದಿಂದಾಗಿ ಮತದಾರರ ನೋಂದಣಿ ಬಗ್ಗೆ ಹೆಚ್ಚಿನ ಪ್ರಚಾರ ನಡೆಸಲು ಸಾಧ್ಯವಾಗದಿರುವ ಕಾರಣ ಜಿಲ್ಲೆಗೆ ಒಬ್ಬರು ಯುವ ಐಕಾನ್ ಆಯ್ಕೆ ಮಾಡಿ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪ್ರೇರಿತರಾಗುವಂತೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಮತಗಟ್ಟೆಗಳು, ಅಂಗನವಾಡಿ ಕೇಂದ್ರಗಳು, ಸರ್ಕಾರಿ ಶಾಲಾ-ಕಾಲೇಜುಗಳು, ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ Know Your BLO ಕುರಿತು ಫಲಕ ಪ್ರದರ್ಶಿಸಲು ತಿಳಿಸಿದರು ಹಾಗೂ ಮತಗಟ್ಟೆ ಅಧಿಕಾರಿ(ಬಿ.ಎಲ್.ಓ.)ಗಳಿಗೆ ಪರಿಕರಗಳನ್ನು ಪೂರೈಸಲು ತಿಳಿಸಿದರಲ್ಲದೆ, ಸ್ವೀಪ್ ಚಟುವಟಿಕೆಗಳ ಕುರಿತು ಛಾಯಾಚಿತ್ರ ಮತ್ತು ದೃಶ್ಯೀಕರಣ ಮಾಡುವಂತೆ ತಿಳಿಸಿದರಲ್ಲದೆ, ಚುನಾವಣಾ ದೂರುಗಳ ನೋಂದಣಿ ಪುಸ್ತಕವನ್ನು ಸರಿಯಾಗಿ ನಿರ್ವಹಿಸುವಂತೆ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿಯನ್ನು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಕೋವಿಡ್-19 ಕಾರಣದಿಂದ ಹೊರಾಂಗಣ ಕಾರ್ಯಕ್ರಮ ನಡೆಸಲಾಗಿಲ್ಲವಾದರೂ, ಮೊಬೈಲ್ ಬಳಸಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮತದಾರರ ನೋಂದಣಿ ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಮ್.ನಾಗರಾಜ ಅವರು ಮಾತನಾಡಿ, ಡಿಸೆಂಬರ್ 7 ರಿಂದ ಮತದಾರರ ನೋಂದಣಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಚುನಾವಣಾ ಆಯೋಗ ಸೂಚಿಸಿದ್ದು, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆ ಇನ್ನಿತರ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ್ ಅವರು ಮಾತನಾಡಿ ಯಾದೃಚ್ಛಿಕವಾಗಿ(Random) ಮನೆ-ಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದ್ದು, ಸೇವಾ ಸಿಂಧೂ ಕೇಂದ್ರಗಳ ಮೂಲಕ ಮತದಾರರ ನೋಂದಣಿಗೆ ಅರ್ಜಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕಿ ಸುಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಸೇರಿದಂತೆ ಜಿಲ್ಲೆಯ ತಹಶೀಲ್ದಾರ್‌ಗಳು, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಡಾ.ಬಿ.ಆರ್.ಮಮತಾ ಅವರು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಜಿಲ್ಲೆಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸುವಿಕೆ ಹಾಗೂ ಸಂಬಂಧಿತ ಕಾರ್ಯಗಳ ಕುರಿತು ಮತಗಟ್ಟೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

