ಬೆಂಗಳೂರು: ಕೃಷಿ ಉದ್ದೇಶಕ್ಕಾಗಿ ಕೊಳವೆ ಬಾವಿಗಳನ್ನು ಕೊರೆಸಿ, ವಾಣಿಜ್ಯಾತ್ಮಕವಾಗಿ ಬಳಸುತ್ತಿರುವುದು ಕಂಡು ಬಂದಲ್ಲಿ, ನಿರ್ದಿಷ್ಟ ಶುಲ್ಕ ವಿಧಿಸಿ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊಳವೆ ಬಾವಿಗಳಿಗೆ ವಾಟರ್ ಮೀಟರ್ ಅಳವಡಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಖಾನೆ ಅಥವಾ ವಸತಿ ಸಮುಚ್ಛಯಗಳಿಗೆ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡುವ ಮುನ್ನ ಮಳೆ ನೀರು ಸಂಗ್ರಹ ವಿಧಾನ ಅಳವಡಿಕೆ ಮತ್ತು ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಕೈಗಾರಿಕೆಗಳಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ನೀಡುವ ಮುನ್ನ ಸ್ಥಳೀಯ ಸಂಸ್ಥೆಗಳು ನೀರನ್ನು ಪೂರೈಸುತ್ತಿಲ್ಲ ಎಂಬ ನಿರಾಕ್ಷೇಪಣಾ ಪತ್ರ ಪಡೆಯುವಂತೆ ತಿಳಿಸಿದರು.
ಕ್ವಾರಿ, ಕೈಗಾರಿಕೆ ಮತ್ತು ಕ್ರಷರ್ ಮುಂತಾದ ಸ್ಥಳಗಳಲ್ಲಿ ಅಂತರ್ಜಲ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕಾರ್ಮಿಕರಲ್ಲಿ ಅರಿವು ಮೂಡಿಸಲು ತಿಳಿಸಿದರಲ್ಲದೆ, ವಾಟರ್ ಆಡಿಟ್ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಹಿರಿಯ ಭೂ ವಿಜ್ಞಾನಿ ಪಲ್ಲವಿ ಮಾತನಾಡಿ, ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ 500 ಮೀಟರ್ ಅಂತರದಲ್ಲಿ ಯಾವುದಾದರೂ ಕೊಳವೆ ಬಾವಿ ಇದೆಯೇ ಎಂಬ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬಳಿ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದ್ದು, ಸ್ಥಳೀಯ ಸಂಸ್ಥೆಗಳು ಈ ಕೆಲಸವನ್ನು ಮಾಡಬೇಕು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕಿ ವಿನುತಾ ರಾಣಿ, ಭೂ ವಿಜ್ಞಾನಿ ವೆಂಕಟೇಶ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

