ಬೆಂಗಳೂರು: ಕೋವಿಡ್-19 ಕಾರಣದಿಂದಾಗಿ ನೆನೆಗುದಿಗೆ ಬಿದ್ದಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು ಸರಳವಾಗಿ ನಡೆದಿದ್ದು, ಹೊಸ ಜೀವನಕ್ಕೆ ಕಾಲಿಟ್ಟ ನವ ವಧು-ವರರು ಅನ್ಯೋನತೆಯಿಂದ ಜೀವನ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್.ಘಾಟಿಯ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ “ಸಪ್ತಪದಿ ಸರಳ ಸಾಮೂಹಿಕ ವಿವಾಹ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಸರಳ ವಿವಾಹಗಳು ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರಲ್ಲದೆ, ನವ ದಂಪತಿಗಳು ಸರಳ ಸಾಮೂಹಿಕ ವಿವಾಹವನ್ನು ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯ ಎಂದರು.
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಮಾತನಾಡಿ ವಧುವಿಗೆ 40 ಸಾವಿರ ಮೌಲ್ಯದ ಮಾಂಗಲ್ಯ, ವಧು-ವರರಿಗೆ 15 ಸಾವಿರ ರೂಪಾಯಿ ನಗದು ನೀಡಲಾಗಿದೆ ಎಂದರಲ್ಲದೆ, ಮೂರು ಅಂತರ್ಜಾತಿ ಜೋಡಿಗಳ ವಿವಾಹ, ಒಂದು ವಿಕಲ ಚೇತನ ಜೋಡಿ ವಿವಾಹ ಸೇರಿದಂತೆ ಒಟ್ಟು ಏಳು ಜೋಡಿಗಳು ಸರಳ ಸಾಮೂಹಿಕ ವಿವಾಹದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆಂದು ಮಾಹಿತಿ ನೀಡಿದರು.
ಸಮಾರಂಭದಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ಮುಜರಾಯಿ ಇಲಾಖೆ ತಹಶೀಲ್ದಾರ್ ಹೇಮಲತಾ ಸೇರಿದಂತೆ ವಿವಿಧ ಅಧಿಕಾರಿಗಳು, ವಧು-ವರರ ಕುಟುಂಬಸ್ಥರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

