ಬೆಂಗಳೂರು: ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಸಿಎಂ ಗೃಹ ಕಚೇರಿ ಕೇಷ್ಣಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಅವರು ತಿಳಿಸಿದ್ದಾರೆ.
ಈ ಮೂಲಕ ಹೊಸ ಸ್ವರೂಪದ ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಕರ್ಫ್ಯೂ ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಬೆಂಗಳೂರಷ್ಟೇ ಅಲ್ಲ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ರಾತ್ರಿ 10 ಗಂಟೆಯ ನಂತರ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್ ಮಾಡಬೇಕು. ಅಂತರರಾಜ್ಯ ಜನ ಸಂಚಾರವನ್ನೂ ನಿಷೇಧಿಸಲಾಗಿದೆ. ಆದರೆ, ರಾತ್ರಿಯ ಹೊತ್ತು ಔಷಧ ಅಂಗಡಿ, ಆಸ್ಪತ್ರೆ ಇತ್ಯಾದಿ ಅಗತ್ಯ ಸೇವೆಗಳಿಗೆ ಅವಕಾಶ ಇರುತ್ತದೆ.
ಜನವರಿ 1ರಂದು ಶಾಲೆಗಳನ್ನ ಪುನಾರಂಭಿಸುವ ಸರ್ಕಾರದ ನಿರ್ಧಾರವನ್ನು ಈ ವೇಳೆ ಪರಿಷ್ಕರಿಸಲಾಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು. ಸದ್ಯಕ್ಕೆ ಶಾಲೆಗಳನ್ನ ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

