ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಸ್ಥಾನಕ್ಕೆ ಕನ್ಯಾಕುಮಾರಿ ಶ್ರೀನಿವಾಸ್ ರಾಜೀನಾಮೆ ಸಲ್ಲಿಸಿದ್ದು, ಜಿಪಂ ಅಧ್ಯಕ್ಷ ಪ್ರಸಾದ್ ಅಂಗೀಕರಿಸಿದ್ದಾರೆ.
ವಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ಹರಿತಲೇಖನಿಗೆ ತಿಳಿಸಿದ್ದಾರೆ. ದೊಡ್ಡಬೆಳವಂಗಲ ಜಿಲ್ಲಾಪಂಚಾಯಿತಿ ಕ್ಷೇತ್ರದಿಂದ ಮೊದಲ ಸಲ ಆಯ್ಕೆಯಾಗಿದ್ದ ಕನ್ಯಾಕುಮಾರಿ ಶ್ರೀನಿವಾಸ್ ಅವರು, ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಅನಂತಕುಮಾರಿ ಅವರು ರಾಜೀನಾಮೆ ನಂತರ ತೆರವಾಗಿದ್ದ ಸ್ಥಾನಕ್ಕೆ ಎರಡನೇ ಅವಧಿಗೆ ಆಯ್ಕೆಯಾಗಿದ್ದರು. ಅಲ್ಲದೆ ಅಧ್ಯಕ್ಷೆ ಸ್ಥಾನಕ್ಕೆ ಜಯಮ್ಮ ರಾಜೀನಾಮೆ ನೀಡಿದ ನಂತರ ಪ್ರಭಾರ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು.
ಜಿಪಂ ಉಪಾಧ್ಯಕ್ಷೆಯಾಗಿ ಸುಮಾರು ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಇವರು ಕರೊನಾ ನಿಯಂತ್ರಣಕ್ಕಾಗಿ ಘೋಷಿಸಲಾದ ಲಾಕ್‌ಡೌನ್ ಸಂಧರ್ಭದಲ್ಲಿ ಅಧಿಕಾರಿಗಳ ಜೊತೆಗೂಡಿ ಕರೊನಾ ಸೋಂಕು ನಿಯಂತ್ರಣಕ್ಕೆ ಸಲಹೆ, ಸಹಕಾರ ನೀಡಿ ಶ್ರಮಿಸಿದ್ದರು.
ಉಪಾಧ್ಯಕ್ಷೆ ಸ್ಥಾನಕ್ಕೆರಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಮಾಜಿ ಸಂಸದ ಎಂ.ವೀರಪ್ಪಮೊಯ್ಲಿ, ರಾಜ್ಯ ಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಸೇರಿದಂತೆ ಜಿಪಂ ಸದಸ್ಯರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

