ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಶಿಷ್ಟಾಚಾರದ ಪ್ರಕಾರ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಕ್ತ ಮಾಸಾಂತ್ಯದೊಳಗೆ ನಡೆಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ರೀಡಾಕೂಟ ನಡೆಯುವ ಸ್ಥಳಗಳಲ್ಲಿ ಆಂಬ್ಯುಲೆನ್ಸ್ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರಲ್ಲದೆ, ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯುವಾಗ ಸ್ಥಳೀಯ ನಗರಸಭೆ ಹಾಗೂ ಪುರಸಭೆಗಳಿಂದ ನೀರು ಸರಬರಾಜು ಮತ್ತು ಸ್ವಚ್ಛತೆ ಕಾಪಾಡುವಂತಹ ಕಾರ್ಯವಾಗಬೇಕು. ಜೊತೆಗೆ ನೌಕರರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಅವರು ಮಾತನಾಡಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೊಂದಲಕ್ಕೆ ಅವಕಾಶ ನೀಡಬಾರದು, ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರು ಮಾತ್ರವೇ ಜಿಲ್ಲಾಮಟ್ಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸಾರ್ವಜನಿಕರ ಹಿತ ಕಾಪಾಡುವುದು ಹಾಗೂ ಶಿಸ್ತುಬದ್ಧವಾಗಿರುವುದು ಸರ್ಕಾರಿ ನೌಕರರ ಆದ್ಯ ಕರ್ತವ್ಯವಾಗಿದೆ. ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಜನವರಿ 25 ರೊಳಗೆ ತಹಶೀಲ್ದಾರ್ ಅವರ ಸಹಕಾರದೊಂದಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಿದರು.
ಕ್ರೀಡಾಕೂಟ ಆಯೋಜನೆಗೆ ದೈಹಿಕ ಶಿಕ್ಷಕರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಅಂಪೈರ್ ತೀರ್ಪು ಅಂತಿಮವಾಗಿರುತ್ತದೆ ಎಂದರಲ್ಲದೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ಹಣಕಾಸಿನ ನೆರವಿನೊಂದಿಗೆ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಗೀತಾ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಗಂಗಾಧರಪ್ಪ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಲೈಕ್ ಮಾಡಿ ಹಾಗೂ ಟ್ವಿಟರ್ ಫಾಲೋ ಮಾಡಿ, ಟೆಲಿಗ್ರಾಂ ಗುಂಪನ್ನು ಸೇರಿ.

