
ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಿಂದ ಕೋಳೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ತಂತಿ ಬೇಲಿ ನಿರ್ಮಿಸಿರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಬುಧವಾರ ಸ್ಥಳಕ್ಕೆ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ದಶಕಗಳಿಂದಲು ರೂಢಿಗತವಾಗಿರುವ ರಸ್ತೆಗೆ ತಂತಿ ಬೇಲಿ ನಿರ್ಮಿಸಿ ಗುಂಡಿಗಳನ್ನು ನಿರ್ಮಿಸಿರುವುದು ತಪ್ಪು. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಅಲ್ಲದೆ ಈ ರಸ್ತೆಯನ್ನು ಜಿಲ್ಲಾ ಪಂಚಾಯಿತಿವತಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ. ಹೀಗಾಗಿ ತುರ್ತಾಗಿ ಸರ್ವೇ ನಡೆಸಿ ರಸ್ತೆ ಒತ್ತುವರಿ ಮಾಡಿಕೊಂಡಿರುವ ಹಾಗೂ ರಸ್ತೆಯಲ್ಲಿ ಗುಂಡಿಗಳನ್ನು ತೋಡಿರುವವರ ವಿರುದ್ಧ ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಗ್ರಾಮದಲ್ಲಿನ ಎಲ್ಲರು ಸಹ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ ದುರುದ್ದೇಶಪೂರಕವಾಗಿ ನಮ್ಮ ವಿರುದ್ಧ ಮಾತ್ರ ದೂರುತ್ತಿದ್ದಾರೆ. ರಸ್ತೆ ಒತ್ತುವರಿ ಮಾಡಿಕೊಂಡಿರುವ ಎಲ್ಲರನ್ನು ತೆರವುಮಾಡಿಸಿದರೆ ನಾವು ಸಹ ರಸ್ತೆಯನ್ನು ಬಿಟ್ಟು ಕೊಡುತ್ತವೆ ಎಂದು ರಸ್ತೆ ಒತ್ತುವರಿ ಆರೋಪ ಎದುರಿಸುತ್ತಿರುವ ಹೊನ್ನಾಘಟ್ಟ ಗ್ರಾಮದ ರುದ್ರೇಶ್ಗೌಡ ತಿಳಿಸಿದರು.
ಗ್ರಾಮಾಂತರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಸಹ ಸ್ಥಳ ಪರಿಶೀಲನೆ ವೇಳೆ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

