
ಬೆಂ.ಗ್ರಾ.ಜಿಲ್ಲೆ: ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿ, ಶ್ರದ್ಧೆಯಿಂದ ಓದುವುದನ್ನು ಅಭ್ಯಾಸ ಮಾಡಿಕೊಳ್ಳುವ ಮೂಲಕ ಸಾಧನೆಯ ಶಿಖರವನ್ನು ತಲುಪಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿಯಲ್ಲಿಂದು ನಡೆದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಒಬ್ಬ ವಿದ್ಯಾರ್ಥಿನಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಪರಿಭಾವಿಸುವ ಕಾರ್ಯಕ್ರಮ”ದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ಕುರಿತ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಮಾತನಾಡಿ, ವೈಯಕ್ತಿಕ ಭಿನ್ನತೆಯು ಪ್ರತಿಯೊಬ್ಬರ ಸೌಭಾಗ್ಯವಾಗಿದ್ದು, ಎಲ್ಲರೂ ಸಹ ಒಂದೊಂದು ವಿಭಾಗದಲ್ಲಿ ಬುದ್ದಿವಂತರಾಗಿರುತ್ತಾರೆ ಎಂದರಲ್ಲದೆ, ಯಾರೊಬ್ಬರೂ ತಮ್ಮೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಿಕೊಳ್ಳಬೇಡಿ ಎಂದು ವೈದ್ಯ ಹಾಗೂ ವಿಜ್ಞಾನಿಯ ಉದಾಹರಣೆಯ ಮೂಲಕ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಅವರು ಮಾತನಾಡಿ, ಹೆಣ್ಣು ಮಕ್ಕಳನ್ನು ಪೋಷಿಸುವ ಹಾಗೂ ಅವರಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಜೊತೆಗೆ ಹೆಣ್ಣು ಮಕ್ಕಳಿಗೆಂದೇ ಇರುವ ವಿವಿಧ ಯೋಜನೆಗಳ ಹಣಕಾಸು ನಿಧಿಯ ಬಗ್ಗೆ ತಿಳಿಸುವುದರೊಂದಿಗೆ ವೈಯಕ್ತಿಕ ಸ್ವಚ್ಛತೆಯ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಹಾಗೂ ಇತರೆ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಗುರುತಿಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಆಹ್ವಾನಿಸಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ 27 ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

