
ದೊಡ್ಡಬಳ್ಳಾಪುರ: ಕರ್ನಾಟಕದ ಇಡೀ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.7ರಂದು ಕುರುಬ ಎಸ್.ಟಿ ಹೋರಾಟ ಸಮಿತಿ ವತಿಯಿಂದ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಮಲ್ಲೇಶ್ ತಿಳಿಸಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯ ಬುಡಕಟ್ಟು ಜನಾಂಗದಿಂದ ಗುರುತಿಸಿಕೊಂಡಿದ್ದು ಈ ಹಿಂದೆ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಇತ್ತು. ಮೂರು ಜಿಲ್ಲೆಗಳಿಂದ ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸುವ ಪ್ರಸ್ತಾಪ ಕೇಂದ್ರಕ್ಕೆ ಹೋಗಿದೆ. ಆದರೆ ಕೊಡಗಿನ ಪ್ರಸ್ತಾಪ ವಾಪಸ್ ಬಂದಿದೆ. ಈ ಎರಡೂ ಪ್ರಸ್ತಾವನೆಗಳೊಂದಿಗೆ ಇಡೀ ಕರ್ನಾಟಕದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು ಕುರುಬ ಎಸ್.ಟಿ ಹೋರಾಟ ಸಮಿತಿ ರಚನೆ ಮಾಡಲಾಗಿದೆ. ಎಸ್.ಟಿ ಸಮುದಾಯದವರು ಶೇ.3 ರಿಂದ 7ಕ್ಕೆ ಮೀಸಲಾತಿ ಬೇಡಿಕೆ ಇಟ್ಟಿದ್ದು, ಅದಕ್ಕೆ ನಮ್ಮ ಬೆಂಬಲವಿದೆ. ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣಕ್ಕೆ ತೊಂದರೆ ಕೊಡುವ ಉದ್ದೇಶ ನಮಗಿಲ್ಲ. ನಮಗಿರುವ ಹಕ್ಕನ್ನು ನಾವು ಕೇಳುತ್ತಿದ್ದೇವೆ. ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಒತ್ತಾಯಿಸಿ ಜನವರಿ 15ರಿಂದ ನಿರಂಜನಾಶ್ರೀಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದ್ದು, ಪಾದಯಾತ್ರೆ ಪೂರ್ಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರ ನೇತೃತ್ವದಲ್ಲಿ ಸಮಾವೇಶಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ತಾಲೂಕು ಕುರುಬರ ಸಂಘದ ಗೌರವ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಒತ್ತಾಯಿಸಿ ಜ.7ರಂದು ಬೆಂಗಳೂರಿನ ಮಾದಾವರದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಸಮಾವೇಶಕ್ಕೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಅನುಕೂಲವಿದ್ದವರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮುದಾಯದ ಹೋರಾಟಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಕುರುಬರ ಸಂಘದ ಖಜಾಂಚಿ ಅರಣ್ ಕುಮಾರ್, ಮುಖಂಡರಾದ ಸತೀಶ್, ಚಂದ್ರಶೇಖರ್, ಮುನಿಕೃಷ್ಣಪ್ಪ, ಮುರಳಿ, ಗೋಪಿ, ಮಾರಣ್ಣ ಮತ್ತಿತರರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

