ಬೆಂ.ಗ್ರಾ.ಜಿಲ್ಲೆ: ಫೆ.20ರಂದು ದೊಡ್ಡಬಳ್ಳಾಪುರ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ನಡೆಯಲಿರುವ ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ದೊಡ್ಡಬಳ್ಳಾಪುರ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ. ಅದೇ ದಿನ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಸಚಿವ ಆರ್.ಅಶೋಕ್ ಜೊತೆಯಲ್ಲಿ ಶಾಸಕರು ಸಹ ಗ್ರಾಮ ವಾಸ್ತವ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಗ್ರಾಮೀಣ ಜನರು ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿರುವುದರಿಂದ ಈ ವ್ಯಾಪ್ತಿಯ ಜನತೆ ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಮೂಲಕ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.