ಬೆಂ.ಗ್ರಾ.ಜಿಲ್ಲೆ: ರಾಜ್ಯ ಸರ್ಕಾರದ ನಿರ್ದೇಶನದಂತೆ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸುವ “ಸುಂದರ ಹಳ್ಳಿ-ಸುಂದರ ಬದುಕು, ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆಗೆ” ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ದೊಡ್ಡಬಳ್ಳಾಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ “ಸುಂದರ ಹಳ್ಳಿ- ಸುಂದರ ಬದುಕು, ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ”, ಕಾರ್ಯಕ್ರಮ”ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊಸಹಳ್ಳಿ ಗ್ರಾಮದಲ್ಲಿ ಫೆಬ್ರವರಿ 20 ರಂದು ನಡೆಯಲಿರುವ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆಗೆ” ಕಾರ್ಯಕ್ರಮವನ್ನು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರು ಉದ್ಘಾಟಿಸಲಿದ್ದು, ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮದಲ್ಲಿರುವ ಪ್ರಮುಖ ಬೀದಿಗಳಿಗೆ ತೆರಳಿ ಅಲ್ಲಿನ ಕುಟುಂಬಗಳ ಕುಂದುಕೊರತೆಗಳನ್ನು ಆಲಿಸಿ, ಅವರ ಮನವಿಯನ್ನು ಸ್ವೀಕರಿಸಲಿದ್ದಾರೆ. ನಂತರ ಅಲ್ಲಿನ ಶಾಲೆಯ ಮೈದಾನದಲ್ಲಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆಯನ್ನು ನೀಡಲಿದ್ದಾರೆ.
ಕೋವಿಡ್-19 ನಿಯಮಗಳು ಪಾಲನೆ, ಸ್ವಚ್ಚತಾ ಕ್ರಮಗಳನ್ನು ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸಿ, ಸಂಬಂಧಪಟ್ಟ ಇಲಾಖೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಸರ್ಕಾರದ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಆಧಾರ್ ತಿದ್ದುಪಡಿ, ಪಡಿತರ ಚೀಟಿ ಮತ್ತು ಮತದಾನ ಗುರುತಿನ ಚೀಟಿ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕಾರ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅರ್ಜಿ ಸ್ವೀಕರಿಸುವ ಕಾರ್ಯ ನಡೆಯಲಿದ್ದು, ವಿವಿಧ ಇಲಾಖೆ ಅಧಿಕಾರಿಗಳು ಕೌಂಟರ್‌ಗಳನ್ನು ತೆರೆದು ಅರ್ಜಿಗಳನ್ನು ಸ್ವೀಕಾರ ಮಾಡಲು ತಯಾರು ಮಾಡಿಕೊಂಡಿರಬೇಕು ಹಾಗೂ ಸರ್ಕಾರದಿಂದ ಇಲಾಖೆವಾರು ಸಾರ್ವಜನಿಕರಿಗೆ ಲಭ್ಯವಿರುವ ಯೋಜನೆಗಳ ಸೌಲಭ್ಯಗಳ ಕುರಿತ ಮಾಹಿತಿಯನ್ನು ಫಲಕಗಳ ಮೇಲೆ ಬಿತ್ತರಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿಗಳು, ರಾತ್ರಿ ಊಟದ ನಂತರ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಲಾಗುವುದು. ಈ ಹಿನ್ನೆಲೆ ಹಾಸ್ಟೆಲ್ ಅನ್ನು ಸ್ಯಾನಿಟೈಜ್ ಮಾಡಿ, ಶುಚಿತ್ವಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹಾಗೂ ಶಾಲೆಯಲ್ಲಿರುವ ನೀಲಗಿರಿ ತೆರವು ಕಾರ್ಯಕ್ರಮ, ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ, ಆರೋಗ್ಯದ ಬಗ್ಗೆ ಅರಿವು ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಆಯಾ ಇಲಾಖೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ ರಾಜಕಾರಣಿಗಳಿಗಿಂತ ಅಧಿಕಾರಿಗಳಿಗೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಹೆಚ್ಚು ತಿಳಿದಿರುವುದರಿಂದ ಸಾರ್ವಜನಿಕರನ್ನು ಗೌರವಯುತವಾಗಿ ನೋಡಿ, ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಗ್ರಾಮ ವಾಸ್ತವ್ಯದಲ್ಲಿ ತಾವು ಭಾಗಿಯಾಗಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂತೋಣಿ ಮರಿಯಪ್ಪನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಡಿವೈಎಸ್ಪಿ ರಂಗಪ್ಪ, ತಹಶಿಲ್ದಾರ್ ಟಿ.ಎಸ್.ಶಿವರಾಜು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.