
ಬಾಗಲಕೋಟೆ: ದೇವಸ್ಥಾನಕ್ಕೆ ಸೇರಿದ ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಲ್ಲಿ ಅಂತಹ ಭೂಮಿ ತೆರವಿಗೆ ಕ್ರಮಕೈಗೊಳ್ಳುವಂತೆ ಹಿಂದೂ ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ಹಿಂದುಳಿದ ಕಲ್ಯಾಣ ಇಲಾಖೆಗಳ ಪ್ರಗತಿ ಪರೀಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದೇವಸ್ಥಾನಕ್ಕೆ ಸೇರಿದ ಆಸ್ತಿ ಅಕ್ರಮವಾಗಿ ಪಡೆದುಕೊಂಡಲ್ಲಿ ತೆರವಿಗೆ ಕ್ರಮವಹಿಸಬೇಕು. ದೇವಸ್ಥಾನದ ಅಭಿವೃದ್ದಿಗೆ ಆಡಳಿತ ಮಂಡಳಿ ರಚನೆ ಮಾಡಬೇಕು. ದೇವಸ್ಥಾನದ ನಿರ್ವಹಣೆ ಕಾರ್ಯದಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.
ಜಿಲ್ಲೆಯಲ್ಲಿರುವ ದೇವಸ್ಥಾನಗಳಿಂದ ಬರುವ ಆದಾಯ ಕಡಿಮೆ ಇದ್ದು, ಹುಂಡಿಯಿಂದ ಬರುವ ಆದಾಯ ಹೆಚ್ಚಳಕ್ಕೆ ಒತ್ತು ನೀಡಬೇಕು. ದೇವಸ್ಥಾನಕ್ಕೆ ಬರುವ ಆದಾಯದಿಂದಲೇ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿ 3 ರಿಂದ 4 ಸಾವಿರ ಕೋಟಿ ರೂ.ಗಳ ಆದಾಯ ಬರುವ ನಿರೀಕ್ಷಿಸಲಾಗುತ್ತಿದ್ದು, ಇದಕ್ಕಾಗಿ ಅಧಿಕಾರಿಗಳು ದೇವಸ್ಥಾನದ ನಿರ್ವಹಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಪ್ರತಿ ಮತಕ್ಷೇತ್ರಕ್ಕೆ 50 ಜೋಡಿಗಳ ಸಾಮೂಹಿಕ ವಿವಾಹಕ್ಕೆ ಗುರಿ ಇಟ್ಟುಕೊಳ್ಳಬೇಕು. ಇದಕ್ಕೆ ಬೇಕಾದ ಅನುದಾನ ಮಂಜೂರಾತಿಗೆ ಕ್ರಮಕೈಗೊಳ್ಳಲಾಗುವುದೆಂದರು. ಇದೇ ಸಂದರ್ಭದಲ್ಲಿ ದೇವಸ್ಥಾನಗಳ ಸರ್ವೇ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಆರಾಧನಾ ಸಮಿತಿಯ ನೇಮಕ ಕಡ್ಡಾಯ ಮಾಡಲು ಸಲಹೆ ನೀಡಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಜಿಲ್ಲೆಯಲ್ಲಿ ವಸತಿ ನಿಲಯಗಳ ಅವಶ್ಯಕತೆ ಹೆಚ್ಚಿಗೆ ಇದ್ದು, ಹೊಸ ವಸತಿ ನಿಲಯ ಮಂಜೂರಾಗಬೇಕು. ಈ ನಿಟ್ಟಿನಲ್ಲಿ ಸಚಿವರು ಕ್ರಮವಹಿಸಲು ತಿಳಿಸಿದರು. ವಸತಿ ನಿಲಯಗಳ ಮೂಲಭೂತ ಸೌಲಭ್ಯಗಳು ಮತ್ತು ಕುಂದು ಕೊರತೆಗಳ ಕುರಿತು ತಾಲ್ಲೂಕುವಾರು ಅಧಿಕಾರಗಳೊಂದಿಗೆ ಚರ್ಚಿಸಿದರು. ವಸತಿ ನಿಲಯಗಳ ಕಟ್ಟದ ನಿರ್ಮಾಣ ಶೀಘ್ರದಲ್ಲೇ ಪೂರ್ಣಗೂಳಿಸುವಂತೆ ಸೂಚಿಸಿದಲ್ಲದೆ ಕಟ್ಟಡ ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ಅಧಿಕಾರಿಗಳಿಗೆ ತಿಳಿಸಿದರು. ಅಧಿಕಾರಿಗಳು ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿಯ ಮೂಲಭೂತ ಸೌಕರ್ಯಗಳು ಮತ್ತು ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಯಶವಂತ ಗುರುಕಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಡೋಂಬರ ಸೇರಿದಂತೆ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

