
ಬೆಂ.ಗ್ರಾ.ಜಿಲ್ಲೆ: ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅತ್ಯಾವಶ್ಯ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎನ್.ನಾಗರಾಜ(ಎಂ ಟಿ ಬಿ) ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2020-21″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ವೃತ್ತಿಪರತೆ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ, ಸಾಧನೆ ಮಾಡಬೇಕು. ಗ್ರಾಮೀಣ ಭಾಗದಿಂದ, ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಅವರು ಕೋನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 5 ಎಕರೆ ಭೂಮಿಯನ್ನು ಗುರುತಿಸಿ ಮಂಜೂರು ಮಾಡಲಾಗಿದ್ದು, ಯೋಜನಾ ಸೇವಾ ಇಲಾಖೆಯಿಂದ ತಂತಿ ಬೇಲಿ ಹಾಕುವ ಕೆಲಸ ಆಗುತ್ತಿದೆ ಎಂದರು. ಇನ್ನೂ ಕ್ರೀಡಾಂಗಣದ ಜೊತೆಗೆ ಜಿಲ್ಲೆಗೆ ಕ್ರೀಡಾ ಹಾಸ್ಟೆಲ್, ಜಿಲ್ಲಾಸ್ಪತ್ರೆ ವ್ಯವಸ್ಥೆಗೆ ಸಚಿವರ ಜೊತೆ ಈಗಾಗಲೇ ಪ್ರಸ್ತಾಪವನ್ನು ಮಾಡಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅವಶ್ಯಕತೆ ಇದೆ ಎಂದರು.
ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದರಲ್ಲದೆ, ಕ್ರೀಡೆಯಲ್ಲಿ ಸೋಲು ಗೆಲುವಿನ ಲೆಕ್ಕದ ಬದಲು, ಭಾಗವಹಿಸುವಿಕೆ ಮುಖ್ಯ ಎಂದು ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿವರುದ್ರೇಗೌಡ ಮಾತನಾಡಿ, ಮಾನಸಿಕ ಮತ್ತು ದೈಹಿಕ ಒತ್ತಡಗಳಿಂದ ಹೊರ ಬರಲು ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ರಾಜ್ಯ ಸರ್ಕಾರಿ ನೌಕರರ ಸಂಘ ಸದಾ ನಿಮ್ಮೊಂದಿಗೆ ಇದ್ದು, ನಿಮ್ಮ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಪ್ರತಿಜ್ಞಾವಿಧಿ ಭೋಧಿಸಲಾಯಿತು.
ನಂತರ ಕ್ರೀಡಾಕೂಟದ ಅಂಗವಾಗಿ ಕ್ರೀಡಾಜ್ಯೋತಿ ಬೆಳಗಲಾಯಿತು ಹಾಗೂ ಬಣ್ಣದ ಬಲೂನ್ ಗಳನ್ನು ಆಕಾಶದೆಡೆಗೆ ಹಾರಿಬಿಡಲಾಯಿತು.
ಕಾರ್ಯಕ್ರಮದಲ್ಲಿ ಕಳೆದ ವರ್ಷ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ರಾಜ್ಯ ಮಟ್ಟದಲ್ಲಿ ವಿಜೇತರಾದ ಭರತನಾಟ್ಯ ನೃತ್ಯ ವಿಭಾಗದ ಮಿಲನಾ ಮತ್ತು ಕಥಕ್ಕಳಿ ಮತ್ತು ಮಣಿಪುರಿ ನೃತ್ಯ ವಿಭಾಗದ ಲೀಲಾವತಿಯವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿವರುದ್ರೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ವಿಜಯಕುಮಾರ್, ತಾಲ್ಲೂಕುಗಳ ಅಧ್ಯಕ್ಷರುಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಆರ್.ಗೀತಾ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

