ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಫೆಬ್ರವರಿ 20 ರಂದು ನಡೆಯಲಿರುವ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಹೊಸಹಳ್ಳಿ ಗ್ರಾಮಕ್ಕಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಖುದ್ದಾಗಿ ಭೇಟಿ ನೀಡಿ, ಗ್ರಾಮದ ಸ್ವಚ್ಛತೆ, ಶಾಲಾ ಆವರಣದಲ್ಲಿ ಸಿದ್ಧಪಡಿಸುತ್ತಿರುವ ವೇದಿಕೆ, ವಿವಿಧ ಇಲಾಖೆಯವರು ತೆರೆಯಲಿರುವ ಸ್ಟಾಲ್‌ಗಳು, ಸಚಿವರ ವಾಸ್ತವ್ಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ವ್ಯವಸ್ಥೆ ಕುರಿತು ಹಾಗೂ ಕಾರ್ಯಕ್ರಮಕ್ಕೆ ಕೈಗೊಳ್ಳಲಾಗುತ್ತಿರುವ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು.
ಜಿಲ್ಲೆಯ ಗಡಿಭಾಗದ ಹಾಗೂ ಹಿಂದುಳಿದ ಹಳ್ಳಿಯಾಗಿರುವ ಹೊಸಹಳ್ಳಿ ಗ್ರಾಮಕ್ಕೆ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ, ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್‌ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಿದ್ದಾರೆ ಎಂದು ಹೇಳಿದರು.ಹೊಸಹಳ್ಳಿ ಗ್ರಾಮದ ಸರ್ಕಾರಿ
ಪ್ರೌಢಶಾಲಾ ಆವರಣದಲ್ಲಿದ್ದ ನೀಲಗಿರಿ ಮರಗಳನ್ನು ತೆರವುಗೊಳಿಸಲಾಗಿದ್ದು, ಸಚಿವರು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆಯ ಆವರಣದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ವತಿಯಿಂದ ಹೊಸಹಳ್ಳಿಯಲ್ಲಿ ಸ್ವಚ್ಛತೆ ಕಾರ್ಯ ಮಾಡಲಾಗಿದ್ದು, ಸರ್ಕಾರಿ ಯೋಜನೆಗಳ ವಿವಿಧ ಸೌಲಭ್ಯಗಳ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ರೇಷ್ಮೆ, ಕೃಷಿ, ಕಂದಾಯ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳು ಸ್ಟಾಲ್‌ಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.ಹೊಸಹಳ್ಳಿಯಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಣ್ಣ ಬಳಿದು ಶೃಂಗಾರ ಮಾಡಲಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಆರೋಗ್ಯ ಇಲಾಖೆಯ ಪ್ರತ್ಯೇಕ ಕೌಂಟರ್ ನಿರ್ಮಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಕೌಂಟರ್ ನಿರ್ಮಿಸಲಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಚಿವರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ವಾಸ್ತವ್ಯ ಹೂಡಲಿದ್ದಾರೆ ಹಾಗೂ ಮಾರನೇಯ ದಿನ(ಫೆಬ್ರವರಿ 21 ರಂದು) ಬೆಳಿಗ್ಗೆ ಹೊಸಹಳ್ಳಿ ಗ್ರಾಮದ ದಲಿತ ಕುಟುಂಬದವರ ಮನೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಉಪಹಾರ ಸೇವಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ಸಿಡಿಪಿಒ ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…