
ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಟೆಕ್ನಿಷಿನ್ಸ್, ಡ್ರೈವರ್, ಗ್ರೂಪ್ ಡಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಜನವರಿ 2021ರ ಮಾಹೆಯ ಅಂತ್ಯದೊಳಗಿನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇರುವುದರಿಂದ ಸಕಾಲದಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಸಾಧ್ಯವಾಗದೆ, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಶೀಘ್ರವೇ ಜಿಲ್ಲೆಯಲ್ಲಿ ಅಗತ್ಯವಿರುವ ವಾಹನ ಸೌಲಭ್ಯ ಹಾಗೂ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ನಡೆದಿರುವ ಫೋಲಿಯೋ ಲಸಿಕೆ ಅಭಿಯಾನ ಮತ್ತು ದಡಾರ ಚುಚ್ಚುಮದ್ದು ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದರಲ್ಲದೆ, ಆರೋಗ್ಯಾಧಿಕಾರಿಗಳು ಕಚೇರಿಯಲ್ಲೇ ಹೆಚ್ಚು ಸಮಯವನ್ನು ಕಳೆಯದೇ, ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ವಾಸ್ತವ ಪರಿಸ್ಥಿತಿ ಮತ್ತು ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯ ಮಾಡಬೇಕು ಜೊತೆಗೆ ಲಸಿಕೆ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಅಂಗನವಾಡಿಗಳಲ್ಲಿ ಸೂಕ್ತ ರೀತಿಯಲ್ಲಿ ಆರೋಗ್ಯ ಪರೀಕ್ಷೆಗಳು ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ತಾಯಿ ಕಾರ್ಡ್ಗಳನ್ನು ನೇರವಾಗಿ ಗರ್ಭಿಣಿಯರ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿರುವ ಕ್ಲಿನಿಕ್ ಗಳು ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿದರೆ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಭವಿಷ್ಯದಲ್ಲಾಗುವ ಅನಾಹುತಗಳಿಗೆ ನೇರವಾಗಿ ಆರೋಗ್ಯ ಇಲಾಖೆಯೇ ಕಾರಣವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಜಿಲ್ಲಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಡಾ. ರಮೇಶ್ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾ ದೇವಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

