ಬೆಂ.ಗ್ರಾ.ಜಿಲ್ಲೆ: ಸರ್ಕಾರದ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳುವ ಮೂಲಕ ಜನರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್. ಕೆ.ನಾಯಕ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ “ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಮತ್ತು ಉದ್ಯಮ ಶೀಲತೆ ಯೋಜನೆಯಡಿ ಸ್ವಯಂ ಉದ್ಯೋಗ ಕಲ್ಪಿಸಲು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆಯಬಹುದಾಗಿದ್ದು, ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ ಅವರು ಮಾತನಾಡಿ ಕೋವಿಡ್ ಹಿನ್ನೆಲೆ, ವಿದ್ಯಾರ್ಥಿ ನಿಲಯಗಳು ನವೆಂಬರ್ ನಲ್ಲಿ ಪ್ರಾರಂಭವಾದ ಕಾರಣ, ಪೂರ್ಣಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿರುವುದಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳಾದ ಹಾಸ್ಟೆಲ್ ಗಳಿಗೆ ಭತ್ಯೆ, ಪಿ.ಹೆಚ್.ಡಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಪಶು ಸಂಗೋಪನೆ ಇಲಾಖೆಯ ಕಾರ್ಯಕ್ರಮಗಳಾದ ಕುರಿ, ಮೇಕೆ, ಹಸು, ನಾಟಿ ಕೋಳಿ ಸಾಕಾಣಿಕೆಗೆ ಸಹಾಯಧನದ ಮೂಲಕ ಉತ್ತೇಜನ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ವಿವಿಧ ಯೋಜನೆಗಳಿಗೆ ಸಾಲ ನೀಡುವಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಯೋಜನಾಧಿಕಾರಿ ವಿನುತಾರಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ.ಸುದ್ದಿಗಳು ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….