ಬೆಂ.ಗ್ರಾ.ಜಿಲ್ಲೆ: ಯುವಜನರಿಗೆ ಕ್ರೀಡಾ ಮನೋಭಾವ ಹೆಚ್ಚಿಸಲು ಕ್ರೀಡಾಂಗಣಗಳು ಅಗತ್ಯವಾಗಿದ್ದು, ಕ್ರೀಡಾಪಟುಗಳಿಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿಂದು “ಒಳಾಂಗಣ ಕ್ರೀಡಾಂಗಣದ ಭೂಮಿ ಪೂಜೆ” ನೆರವೇರಿಸಿ ಅವರು ಮಾತನಾಡಿದರು.
ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ 60 ಲಕ್ಷ ರೂ. ಅನುದಾನದಲ್ಲಿ ಕಬ್ಬಡಿ ಮತ್ತು ಕುಸ್ತಿಗೆಂದು ಒಳ ಕ್ರೀಡಾಂಗಣವನ್ನು ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಗಿದ್ದು, ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ವಿವಿಧ ಕ್ರೀಡೆಗಳ ಅಭ್ಯಾಸಕ್ಕಾಗಿ ಕ್ರೀಡಾಪಟುಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾ ಪಂಚಾಯಿತಿ ಕಂಕಣಬದ್ದವಾಗಿದೆ ಎಂದರಲ್ಲದೆ, ಒಳ ಕ್ರೀಡಾಂಗಣದ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿದ್ದು, ಕ್ರೀಡಾಂಗಣ ನಿರ್ಮಾಣ ಗುಣಮಟ್ಟದಿಂದ ಕೂಡಿರಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್. ಮಾತನಾಡಿ
ಕಬ್ಬಡಿ ಮತ್ತು ಕುಸ್ತಿ ಪಂದ್ಯಾವಳಿಗಳಿಗೆ ಒಳ ಕ್ರೀಡಾಂಗಣ ಅಗತ್ಯ ಇರುವುದರಿಂದ ಸುಮಾರು 60 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ಅದರಡಿಯಲ್ಲೇ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಮಾಡಲಾಗಿದೆ ಎಂದರಲ್ಲದೆ, ನಿರ್ಮಾಣವಾಗಲಿರುವ ಕ್ರೀಡಾಂಗಣವನ್ನು ಕ್ರೀಡಾಪಟುಗಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಾದರಿಯಾಗಬೇಕು ಎಂದರು ಹಾಗೂ ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಫೂರ್ತಿ ಬೆಳೆಯುವಂತಾಗಬೇಕು ಎಂದು ತಿಳಿಸಿದರು.
ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ಜಿಲ್ಲಾ ಕ್ರೀಡಾಂಗಣ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಎನ್.ಅನಂತಕುಮಾರಿ, ದೇವನಹಳ್ಳಿ ಪುರಸಭೆ ಅಧ್ಯಕ್ಷ ರೇಖಾ ವೇಣುಗೋಪಾಲ್, ಸದಸ್ಯರಾದ ಪುಷ್ಪಲತಾ ಲಕ್ಷ್ಮಿ ನಾರಾಯಣ್, ಜಿ.ಎ.ರವೀಂದ್ರ, ಗೋಪಿ, ರವಿಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಖಂಡ ಜಗನ್ನಾಥ್, ಪೈಲ್ವಾನ್ ಮಂಜಣ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಗೀತಾ, ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ನಿರ್ದೇಶಕ ರುದ್ರಮುರ್ತಿ, ದೇವನಹಳ್ಳಿ ಪುರಸಭೆ ಮುಖ್ಯಧಿಕಾರಿ ನಾಗರಾಜ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಅಭಿಯಂತರೆ ಪೂಜಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..