
ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಂಡಮಗೆರೆ ಕೆರೆ ಹಾಗೂ ಮಾಕಳಿ ಬೆಟ್ಟವನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಭಾನುವಾರ ಪ್ರವಾಸೋದ್ಯಮ ಮತ್ತು ಪರಿಸರ,ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿ ಸ್ಥಳೀಯ ಮುಖಂಡರಿಂದ ಮಾಹಿತಿ ಪಡೆದರು.

ಮಾಕಳಿ ಬೆಟ್ಟದ ಮೇಲಿನ ಮಲ್ಲೇಶ್ವರಸ್ವಾಮಿ ದೇವಾಲಯ, ಕಲ್ಯಾಣಿಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ದೇವಾಲಯ ಟ್ರಸ್ಟ್ನ ಸದಸ್ಯರ ಕೆಲಸವನ್ನು ಸಚಿವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಿ.ಪಿ.ಯೋಗೇಶ್ವರ್, ಈಗಾಗಲೇ ಮಾಕಳಿ ಬೆಟ್ಟವನ್ನು ಇಕೋ ಟೂರೀಜಿಂ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಹಾಗೂ ಚಾರಣಕ್ಕಾಗಿ ವಿವಿಧ ಭಾಗಗಳಿಂದ ಪ್ರವಾಸಿಗರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಬರುತ್ತಿದ್ದಾರೆ. ಚಾರಣಕ್ಕೆ ಬರುವವರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರವಾಸೋಧ್ಯಮ ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಲಿದೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ಪ್ರವಾಸೋಧ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸುವ ಸಲುವಾಗಿ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಹಣವನ್ನು ಸಹ ಮೀಸಲಿಟ್ಟಿದ್ದಾರೆ. ಪ್ರವಾಸೋಧ್ಯಮ ಇಲಾಖೆ ಅಧಿಕಾರಿಗಳ ತಂಡದಿಂದ ಇಲ್ಲಿಗೆ ಅಗತ್ಯ ಇರುವ ಕಾಮಗಾರಿಗಳ ಪಟ್ಟಿಯನ್ನು ಸಿದ್ದಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವತ್ಥನಾರಾಯಣಕುಮಾರ್, ಮುಖಂಡರಾದ ಗೋಪಾಲ್ ನಾಯಕ್, ಶಿವಾನಂದ ರೆಡ್ಡಿ, ಮಂಜುನಾಥರೆಡ್ಡಿ, ಪ್ರಕಾಶರೆಡ್ಡಿ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

