ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆಯ ಸೋಂಕು ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಗ್ರಾಮ ಪಂಚಾಯಿತಿ ಹಂತದಲ್ಲಿಯೂ ಅಧಿಕಾರಿಗಳ ತಂಡಗಳನ್ನು ರಚಿಸಿ, ಕೋವಿಡ್ ನಿಯಂತ್ರಣಕ್ಕೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ ಮಾರ್ಚ್ 2021ರ ಮಾಹೆಯ ಅಂತ್ಯದವರೆಗಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ( ಕೆ.ಡಿ.ಪಿ ) ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಮದುವೆ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನಿಯಂತ್ರಿಸಬೇಕು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದರು. ಅಲ್ಲದೆ, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ಆರು ತಿಂಗಳ ಕಾಲ ಕಲ್ಯಾಣ ಮಂಟಪಗಳನ್ನು ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಗಳೂರು ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಗ್ರಾಮಾಂತರ ಜಿಲ್ಲೆಯಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯ ಎಂದರು.
ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಬಗ್ಗೆ ಹಾಗೂ ಕೋವಿಡ್ ಲಸಿಕೆ ಪಡೆದುಕೊಳ್ಳುವ ಬಗ್ಗೆ ಮಾಹಿತಿಯುಳ್ಳ ಕರಪತ್ರಗಳನ್ನು ಪ್ರಕಟಿಸಿ, ಜಿಲ್ಲೆಯ ಪ್ರತಿ ಮನೆ ಮನೆಗೂ ಶೀಘ್ರವಾಗಿ ತಲುಪಿಸುವ ಕೆಲಸವನ್ನು ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದರು.
ಕೋವಿಡ್ ಜೊತೆಗೆ ಜೀವನವನ್ನು ನಡೆಸಬೇಕಾಗಿರುವುದು ಅನಿವಾರ್ಯ ಆರುವುದರಿಂದ, ರಾಜ್ಯದ ಆದಾಯದ ಬಹುಪಾಲು ಕೋವಿಡ್ ನಿಯಂತ್ರಣಕ್ಕೆ ಬಳಸಬೇಕಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಯಾವುದೇ ಜಾತ್ರೆಗಳಿಗೆ ಅನುಮತಿ ನೀಡಬಾರದು ಹಾಗೂ ಸಂತೆಗಳಲ್ಲಿ ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ 10 ಅಡಿ ಅಂತರ ಇರಬೇಕು ಎಂದು ಸಲಹೆ ನೀಡಿದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆ ಮೀಸಲಿರಿಸುವಂತೆ ನೋಡಿಕೊಳ್ಳಬೇಕು ಎಂದರಲ್ಲದೆ, 1 ರಿಂದ 9ನೇ ತರಗತಿಗಳು ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಕೋವಿಡ್ ಕೇಂದ್ರಗಳಾಗಿ ಪರಿವರ್ತಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಆಂಬ್ಯುಲೆನ್ಸ್‌ಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು ಹಾಗೂ ಕೋವಿಡ್ ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕರೆದೊಯ್ಯುವ ವೇಳೆ ಸೈರನ್ ಶಬ್ದವನ್ನು ಮಾಡುವಂತಿಲ್ಲ ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಭಯಮುಕ್ತ ವಾತಾವರಣ ನಿರ್ಮಾಣಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 71023 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಜನರು ಲಸಿಕೆ ಪಡೆಯುವಂತೆ ಉತ್ತೇಜಿಸುವ ಕೆಲಸವಾಗಬೇಕು ಹಾಗೂ ಲಸಿಕೆಯನ್ನು ಪಡೆಯದ ಅಧಿಕಾರಿಗಳು ಲಸಿಕೆ ಸ್ವೀಕರಿಸುವಂತೆ ತಿಳಿಸಿದರು.
ಬೇಸಿಗೆ ಆರಂಭವಾಗಿದ್ದು, ಪ್ರಸ್ತುತ ಮೂರು ತಿಂಗಳ ಅವಧಿಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಅಗತ್ಯವಿರುವೆಡೆ ಖಾಸಗಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರಲ್ಲದೆ, ಇದಕ್ಕಾಗಿ ಶೀಘ್ರವೇ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಪೌರಾಡಳಿತ ಮತ್ತು ಸಕ್ಕರೆ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಮಾತನಾಡಿ, ಅತಿವೃಷ್ಠಿ ಹಾಗೂ ಕೋವಿಡ್ ನಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ಕುಡಿಯುವ ನೀರಿಗೆ ಜಿಲ್ಲೆಗಳು ಕೇಳಿದಷ್ಟು ಅನುದಾನ ನೀಡಲಾಗುತ್ತಿಲ್ಲ, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು ಅಸಮರ್ಪಕವಾಗಿ ಪೂರೈಸಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದ್ದು, ಅದರೊಂದಿಗೆ ಬೀದಿ ದೀಪಗಳ ನಿರ್ವಹಣೆ ಮತ್ತು ಸ್ವಚ್ಛತೆ ಕಾಪಾಡುವುದು ಮುಖ್ಯವಾಗಿದೆ ಎಂದರು.
ಪುರಸಭೆ ಹಾಗೂ ನಗರಸಭೆಗಳು ತೆರಿಗೆ ಸಂಗ್ರಹಿಸುವ ಮೂಲಕ ಜಿಲ್ಲೆಯ ಆರ್ಥಿಕ ಸ್ಥಿತಿಗತಿ ಸುಧಾರಣೆಗೆ ತರಬೇಕು ಹಾಗೂ ತೆರಿಗೆ ವಂಚನೆ ಆಗದಂತೆ, ಅಕ್ರಮ ಖಾತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.
ನಗರಸಭೆ ಹಾಗೂ ಪುರಸಭೆಗಳ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಹಾಗೂ ಅಗತ್ಯವಿದ್ದರೆ ಖಾಸಗಿ ಕೊಳವೆ ಬಾವಿಗಳ ಸಹಾಯದಿಂದ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಹೊಸದಾಗಿ ಕೊಳವೆಬಾವಿ ಕೊರೆಯಲು ಹಣ ಬಿಡುಗಡೆ ಮಾಡುವಂತೆ ಕೋರಿದರು ಹಾಗೂ ಕಳೆದ ವರ್ಷ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದ್ದು, ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಸಚಿವರ ಗಮನಕ್ಕೆ ತಂದರು.
ಎತ್ತಿನಹೊಳೆ ಯೋಜನೆಯಡಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕು ಹಾಗೂ ಬೆಂಗಳೂರು ನಗರದ ವೃಷಭಾವತಿಯಿಂದ ಸಂಸ್ಕರಿಸಿದ ನೀರನ್ನು ತಾಲ್ಲೂಕಿನ ಕೆರೆಗಳಿಗೆ ಹರಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಬೇಕಿದೆ ಎಂದರಲ್ಲದೆ, ಮಾರುಕಟ್ಟೆಗೆ ಈಗಾಗಲೇ ರೈತರು ರಾಗಿಯನ್ನು ನೀಡಿದ್ದು, ರೈತರಿಗೆ ನೀಡಬೇಕಾದ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಹೊಸಕೋಟೆ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನಗರಸಭೆ ವತಿಯಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ತಾಲ್ಲೂಕಿನಲ್ಲಿ ಕೋವಿಡ್ ವೈರಸ್‌ನ ತೀವ್ರತೆ ಹೆಚ್ಚಾಗುತ್ತಿದ್ದು, ಲಸಿಕೆಯನ್ನು ಹೆಚ್ಚು ಮಂದಿಗೆ ನೀಡುವಂತಾಗಬೇಕು ಎಂದರು.
ಕೋವಿಡ್ ನಿಯಂತ್ರಿಸುವಲ್ಲಿ ಕೆಲಸ ಮಾಡುತ್ತಿರುವ ಫ್ರಂಟ್‌ಲೈನ್ ಸಿಬ್ಬಂದಿಗಳು ಮೊದಲು ಲಸಿಕೆ ಪಡೆಯುವ ಮೂಲಕ ಇತರರಲ್ಲೂ ಧೈರ್ಯ ತುಂಬುವ ಕೆಲಸ ಮಾಡಬೇಕು ಹಾಗೂ ಮೂರು ತಿಂಗಳುಗಳ ಕಾಲ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಲಿದ್ದು, ಜಿಲ್ಲೆಗೆ ಕುಡಿಯುವ ನೀರಿನ ಸಂಬಂಧ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾತನಾಡಿ, ಕೋವಿಡ್ ನಿಯಂತ್ರಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಸಭೆಗಯ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಡ್ ಗಳನ್ನು ಮೀಸಲಿಡಲಾಗಿದೆ, ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ವಸತಿ ಶಾಲೆಗಳನ್ನು ಬಳಸಿಕೊಂಡು ಕೋವಿಡ್ ನಿಯಂತ್ರಣಕ್ಕೆ ತರಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್, ಉಪಾಧ್ಯಕ್ಷರಾದ ರೂಪ ಮರಿಯಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚೆನ್ನಣ್ಣನವರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಒಳಗೊಂಡ ಭಿತ್ತಿಪತ್ರ(ಪೋಸ್ಟರ್‌ಗಳನ್ನು) ಜಿಲ್ಲಾ ಉಸ್ತುವಾರಿ ಸಚಿವರು ಬಿಡುಗಡೆಗೊಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….