ಬೆಂ.ಗ್ರಾ.ಜಿಲ್ಲೆ: ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ಅವರು ಕ್ರಾಂತಿಕಾರಿ ಹೆಜ್ಜೆಯನ್ನಿಡುವ ಮೂಲಕ ಸಮಾಜದಲ್ಲಿ ತುಳಿತಕ್ಕೆ, ಶೋಷಣೆಗೆ ಒಳಗಾದವರ ಪರ ಧ್ವನಿ ಎತ್ತಿದವರು ಹಾಗೂ ಹಲವಾರು ಕಟ್ಟುಪಾಡುಗಳನ್ನು ನಿರ್ಮೂಲನೆ ಮಾಡಲು ಶ್ರಮಿಸಿದವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರು ಹೇಳಿದರು.
ಡಾ|| ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ 114 ನೇ ಜನ್ಮ ದಿನಾಚರಣೆಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ಡಾ|| ಬಿ.ಆರ್.ಅಂಬೇಡ್ಕರ್ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಪ್ರತಿಯೊಬ್ಬರೂ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರು ಪಡೆದ ಜ್ಞಾನಕ್ಕೆ ಗೌರವ ಸಲ್ಲಿಸಬೇಕು ಎಂದರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಹಾಗೂ ವಿದೇಶಗಳಲ್ಲಿ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಸಂರಕ್ಷಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಾತಿ, ವರ್ಣ ಹಾಗೂ ಮೇಲು-ಕೀಳು ಎಂಬ ವ್ಯವಸ್ಥೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ದೇಶಾದ್ಯಂತ ಸಂಚರಿಸಿ, ಹೋರಾಟದ ಮೂಲಕ ಅರಿವು ಮೂಡಿಸಿದ್ದರು ಹಾಗೂ ವೃತ್ತಿಗೆ ಅನುಗುಣವಾಗಿ ಬದುಕಿದರೆ ಅದು ಅನಾಗರಿಕತೆಯಾಗುತ್ತದೆ ಎಂದರಲ್ಲದೆ, ಎಲ್ಲರೂ ಜ್ಞಾನವನ್ನು ಪಡೆಯುವ ಮೂಲಕ ಗೌರವಯುತ ಜೀವನ ನಡೆಸಬೇಕು ಎಂದು ಅಂಬೇಡ್ಕರ್ ಅವರು ಕನಸು ಕಂಡಿದ್ದರು ಎಂದು ಹೇಳಿದರು.
ತುಳಿತಕ್ಕೆ, ಶೋಷಣೆಗೆ ಒಳಗಾದವರನ್ನು ಮುಖ್ಯ ವಾಹಿನಿಗೆ ತರುವ ಮೂಲಕ ಅವರನ್ನು ಸಬಲರನ್ನಾಗಿಸುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿದ್ದು, ಜಾತಿ ತಾರತಮ್ಯ, ಮೇಲು – ಕೀಳು ಎಂಬ ಭಾವನೆ ಹೋಗಬೇಕು ಎಂದರಲ್ಲದೆ, ರಾಜಕೀಯ ಸೇರಿದಂತೆ ಎಲ್ಲಾ ರಂಗಗಳಲ್ಲೂ ಮೀಸಲಾತಿ ಮುಂದುವರೆಯಬೇಕು ಹಾಗೂ ಸಮಾಜದ ಪಿಡುಗುಗಳನ್ನು ನಿವಾರಣೆ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನ್ ರಾಮ್ ಅವರು ಶೋಷಿತರ ಪರವಾಗಿ ಕೆಲಸ ಮಾಡಿದ್ದು, ಮೊರಾರ್ಜಿ ದೇಸಾಯಿ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು ಹಾಗೂ ದೇಶದ ಪ್ರಗತಿಗೆ ಡಾ||ಬಿ.ಆರ್.ಅಂಬೇಡ್ಕರ್ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅಪಾರವಾದದ್ದು ಎಂದು ತಿಳಿಸಿದರು.
ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಜಿಲ್ಲಾಡಳಿತ ಭವನದ ಮುಂಭಾಗ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ದೇಶದಲ್ಲಿಯೇ ಅತ್ಯಂತ ದೊಡ್ಡ ಹಬ್ಬವಾಗಿ ಆಚರಣೆ ಮಾಡಲಾಗುತ್ತಿದೆ, ದೇಶದ ಎಲ್ಲಾ ಧರ್ಮ, ಸಂಸ್ಕೃತಿಯ ಜನರಿಗೆ ಕಾನೂನು ರಚಿಸುವ ಮೂಲಕ ಗೌರವ ಹಾಗೂ ನೆಮ್ಮದಿಯಿಂದ ಬದುಕಲು ಸಂವಿಧಾನದ ಮೂಲಕ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
ಡಾ|| ಬಿ.ಆರ್.ಅಂಬೇಡ್ಕರ್ ಅವರು ಅತ್ಯುತ್ತಮ ನ್ಯಾಯವಾದಿಯಾಗಿ ಕೆಲಸ ಮಾಡಿದ್ದು, ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯ ಹಾಗೂ ದೇಶವನ್ನು ಮುನ್ನಡೆಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಡಾ|| ಬಾಬು ಜಗಜೀವನ್ ರಾಮ್ ಅವರು ಸಹ ಶೋಷಿತರ, ಅಸಹಾಯಕರ ಪರವಾಗಿ ಕೆಲಸ ಮಾಡಿದ್ದು, ಕೇಂದ್ರ ಸಚಿವರಾಗಿ ಕೃಷಿ ಕ್ಷೇತ್ರದಲ್ಲಿ ಹಲವಾರು ಗಮನಾರ್ಹ ಪ್ರಗತಿ ಸಾಧಿಸಲು ಶ್ರಮಿಸಿದ್ದಾರೆ ಹಾಗೂ ದೇಶದಾದ್ಯಂತ ಆಣೆಕಟ್ಟುಗಳನ್ನು ಕಟ್ಟುವ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆಯನ್ನು ಅನುಭವಿಸಿದ್ದರು. ಬಾಲ್ಯದಲ್ಲೇ ಸಮಾಜದಲ್ಲಿ ಬದಲಾವಣೆ ಮಾಡಲೇಬೇಕು ಎಂಬ ಕನಸನ್ನು ಕಂಡಿದ್ದವರು ಎಂದರು.
ಸಮಾಜದಲ್ಲಿ ವೃತ್ತಿ ಆಧಾರಿತವಾಗಿ ಜಾತಿ ವ್ಯವಸ್ಥೆ ಮಾಡಲಾಗಿದ್ದು, ಸ್ವಾತಂತ್ರ್ಯ ಬಂದು ಹಲವಾರು ವರ್ಷಗಳು ಕಳೆದರೂ ಸಹ ಜಾತಿ ವ್ಯವಸ್ಥೆ ನಿರ್ನಾಮವಾಗದೆ ಇರುವುದು ವಿಷಾದನೀಯ ಎಂದರಲ್ಲದೆ, ಎಲ್ಲರೂ ಸ್ವಾರ್ಥವನ್ನು ತೊರೆದು ಜನಪರ ಕೆಲಸ ಮಾಡಬೇಕು ಹಾಗೂ ಪ್ರತಿಯೊಬ್ಬರಲ್ಲೂ ಪ್ರಜ್ಞೆ, ಪರಿವರ್ತನೆ, ಸಮರ್ಪಣಾಭಾವ ಇರಬೇಕು ಎಂದು ಸಲಹೆ ನೀಡಿದರು.
ಡಾ|| ಬಿ.ಆರ್.ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಮೆಚ್ಚುವ ರೀತಿಯಲ್ಲಿ ದೇಶಕ್ಕೆ ಸಂವಿಧಾನ ರಚನೆ ಮಾಡಿದ್ದಾರೆ. ತುಳಿತಕ್ಕೆ ಒಳಗಾದವರಿಗೆ ಹಾಗೂ ಮಹಿಳೆಯರಿಗೆ ಸಂವಿಧಾನದ ಮೂಲಕ ಭದ್ರತೆ, ರಕ್ಷಣೆಯನ್ನು ನೀಡಿದ್ದಾರೆ ಎಂದರಲ್ಲದೆ, ಮಹಾನಾಯಕ ಧಾರವಾಹಿ ಮೂಲಕ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ನೋಡುವಂತಾಗಿದೆ ಎಂದು ತಿಳಿಸಿದರು.
ದೇವನಹಳ್ಳಿಯಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು 20 ಎಕರೆ ಜಮೀನು ಹಾಗೂ 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು ಮನವಿ ಮಾಡಿದರಲ್ಲದೆ, ದೇವನಹಳ್ಳಿ ತಾಲ್ಲೂಕಿನಲ್ಲಿರುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭವನಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.
ಚೌಡಪ್ಪನಹಳ್ಳಿ ಬೌದ್ಧ ಪೀಠದ ಗುರುಗಳಾದ ಪೂಜ್ಯ ನ್ಯಾನಾಲೋಕ ಬಂತೋಜಿ ಸ್ವಾಮಿ ಅವರು ಮಾತನಾಡಿ, ಪ್ರತಿಯೊಬ್ಬರೂ ಶುದ್ದ ಜೀವನ ನಡೆಸಬೇಕು ಹಾಗೂ ಬುದ್ಧ ಬೋಧಿಸಿದ ನೀತಿಯನ್ನು ಅನುಸರಿಸುವ ಮೂಲಕ ಜೀವನವನ್ನು ಸನ್ನಡತೆ ಮಾರ್ಗದಲ್ಲಿ ನಡೆಯಬೇಕು ಎಂದರಲ್ಲದೆ, ಪಂಚಶೀಲ ತತ್ವಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ ಬಗ್ಗೆ ಹಿರಿಯ ಕವಿ ಹಾಗೂ ಚಿಂತಕ ಡಾ|| ಮೂಡ್ನಾಕೂಡ ಚಿನ್ನಸ್ವಾಮಿ ಹಾಗೂ ಚಿಂತಾಮಣಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ|| ಎಂ.ಎನ್. ರಘು ಅವರು ಉಪನ್ಯಾಸ ನೀಡಿದರು.
ಜಿಲ್ಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ದಲಿತ ಮುಖಂಡರನ್ನು ಸನ್ಮಾನಿಸಲಾಯಿತು ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷ ರೂಪ ಮರಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಅನಂತಕುಮಾರಿ ಚಿನ್ನಪ್ಪ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೌರಮ್ಮ ರಾಮಣ್ಣ, ಉಪಾಧ್ಯಕ್ಷ ಕಾಂತ ಮುನಿರಾಜು, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಡಿವೈಎಸ್ಪಿ ಟಿ.ರಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ “ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ನೆರವೇರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..