ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ನೋಡಲ್ ಅಧಿಕಾರಿಗಳಾಗಿ ನೇಮಕವಾದಂತಹ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ, ತಮಗೆ ವಹಿಸಿರುವ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ “ಕೋವಿಡ್-19 ನಿಯಂತ್ರಣ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಹಾಸಿಗೆ, ಆಕ್ಸಿಜನ್, ಔಷಧ, ಆಹಾರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸೂಚಿಸಿದರು.
ಈಗಾಗಲೇ ನಿಗದಿಪಡಿಸಿರುವ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ, ಆಕ್ಸಿಜನ್ ಹಾಗೂ ರೆಮ್‌ಡಿಸಿವರ್ ಔಷಧಿ ಪೋಲಾಗದಂತೆ ಕ್ರಮ ಕೈಗೊಳ್ಳಬೇಕು ಎಂದರಲ್ಲದೆ, ಆಕ್ಸಿಜನ್ ಮತ್ತು ರೆಮ್‌ಡಿಸಿವರ್ ಔಷಧಿಯ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿರುವುದು ಗಮನಕ್ಕೆ ಬಂದ ಕೂಡಲೇ, ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅಗತ್ಯವಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ನಡೆಯುವ ಕೋವಿಡ್-19 ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬೇಕು. ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ವಾರಕ್ಕೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು.
ಕೋವಿಡ್ ಸಾಂಕ್ರಾಮಿಕ ರೋಗದ ಕಠಿಣ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಸಹಕಾರದಿಂದ ಕೆಲಸ ನಿರ್ವಹಿಸಬೇಕು. ತಪ್ಪಿದಲ್ಲಿ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ಕೋವಿಡ್-19 ಎರಡನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರನ್ವಯ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಲವು ಹಂತಗಳಲ್ಲಿ ತಂಡಗಳನ್ನು ರಚಿಸಲಾಗಿದ್ದು ನೋಡಲ್ ಅಧಿಕಾರಿಗಳು ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ತಂಡಗಳೊಂದಿಗೆ ಸಮನ್ವಯ ಸಾಧಿಸಿ, ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19 ಸೋಂಕನ್ನು ಹತೋಟಿ ತರುವ ಕೆಲಸ ಮಾಡಬೇಕು ಎಂದರು.
ಈಗಾಗಲೇ ನಗರ ಪ್ರದೇಶಗಳಿಂದ ಹಲವಾರು ಮಂದಿ ಗ್ರಾಮಾಂತರ ಪ್ರದೇಶಕ್ಕೆ ಮರಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ತಂಡಗಳು ಅವರೆಲ್ಲರನ್ನು ಗುರುತಿಸಿ, ಮಾಹಿತಿ ಪಡೆದು, ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದರಲ್ಲದೆ, ಉದ್ಯೋಗ ಬಯಸುವವರಿಗೆ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ವಿತರಿಸಿ, ಉದ್ಯೋಗ ನೀಡಬೇಕು ಎಂದು ಈಗಾಗಲೇ ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ತಹಶೀಲ್ದಾರ್, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. 2021ರ ಮೇ 01 ರಿಂದ ಆರಂಭವಾಗಲಿರುವ ಮೂರನೇ ಸುತ್ತಿನ ಲಸಿಕಾಕರಣವು 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಲಸಿಕೆ ಪಡೆಯುವವರು ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಸಬೇಕು ಎಂದು ಹೇಳಿದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರಲ್ಲದೆ, ಜಿಲ್ಲೆಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಕೃಷಿ, ತೋಟಗಾರಿಕೆಗೆ ಸಂಬಂಧಿಸಿದ ವಾಹನಗಳನ್ನು ಅನವಶ್ಯಕವಾಗಿ ತಡೆ ಹಿಡಿಯಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಕೈಗಾರಿಕೆಗಳು ತಮ್ಮ ತ್ಯಾಜ್ಯ, ವಿಷಪೂರಿತ ನೀರನ್ನು ಕೆರೆ, ಕುಂಟೆ, ಬಾವಿಗಳಿಗೆ ಬಿಡದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಮಹೇಶ್.ಎನ್.ಎಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….