ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಮೃತಪಟ್ಟವರ ಶವಸಂಸ್ಕಾರಕ್ಕೆ ಆಯಾ ತಾಲ್ಲೂಕಿನಲ್ಲೇ ತಾತ್ಕಾಲಿಕವಾಗಿ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಕೋರಮಂಗಲ ಕೆರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಚಿತಾಗಾರದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಕಂದಾಯ ಸಚಿವರು ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಸೋಂಕು ಅನೇಕರನ್ನು ಬಲಿಪಡೆಯುತ್ತಿದೆ. ವಿಧಿವಿಧಾನದ ಮೂಲಕ ಶವಸಂಸ್ಕಾರ ನೆರವೇರಿಸಲು ಆಯಾ ಭಾಗದಲ್ಲೇ ಸರ್ಕಾರಿ ಜಮೀನುಗಳಲ್ಲಿ ತಾತ್ಕಾಲಿಕ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದರು.
ಬೆಂಗಳೂರಿನ ತಾವರೆಕೆರೆ ಹಾಗೂ ಗಿಡ್ಡಪ್ಪನಹಳ್ಳಿಯಲ್ಲಿ ಈಗಾಗಲೇ ಚಿತಾಗಾರ ಆರಂಭವಾಗಿದೆ. ಅದೇ ಮಾದರಿಯಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ ಚಿತಾಗಾರ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಉಳಿದ ಮೂರು ತಾಲ್ಲೂಕುಗಳಲ್ಲಿ ಚಿತಾಗಾರ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ ಸಚಿವರು ಇದೊಂದು ಭಾವನಾತ್ಮಕ ಪ್ರಕ್ರಿಯೆ ಆಗಿರುವುದರಿಂದ ಶವಸಂಸ್ಕಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಾರದು. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೃತಪಟ್ಟವರ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಪರದಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಸುತ್ತಮುತ್ತ ತಾತ್ಕಾಲಿಕ ಚಿತಾಗಾರಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಕಾರಣದಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಕರೆತರುವ ಅಂಬುಲೆನ್ಸ್ ಗಳಲ್ಲಿ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವುದರಿಂದ ಇನ್ನುಂದೆ ಇಂಥ ಶವಸಂಸ್ಕಾರಕ್ಕೆ ಉಚಿತ ಅಂಬುಲೆನ್ಸ್ ಸೇವೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ವಿಚಾರದಲ್ಲಿ ಯಾರೇ ಆಗಲಿ ಅಕ್ರಮ ಎಸಗಿದರೆ, ಸೋಂಕಿತರು ಹಾಗೂ ಸಂಬಂಧಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ನೋಟೀಸ್ ಸಹಾ ನೀಡದೆ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..