ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಸೂಚನೆಯಂತೆ ಮೇ 24 ರವರೆಗೆ ಜಾರಿ ಮಾಡಿರುವ ಕಠಿಣ ಲಾಕ್‍ಡೌನ್ ಹಿನ್ನಲೆಯಲ್ಲಿ ತಾಲೂಕಿನಲ್ಲಿ ವಾಣಿಜ್ಯ ವ್ಯವಹಾರಗಳು ಸ್ಥಬ್ದಗೊಂಡಿದ್ದವು.
ತುರ್ತು ಅಗತ್ಯ ಹೊರತುಪಡಿಸಿದಂತೆ ಸಾರಿಗೆ ಸಂಚಾರ ಪೂರ್ಣ ಸ್ಥಗಿತಗೊಂಡಿತ್ತು. ಬೆಳಿಗ್ಗೆ 6 ರಿಂದ 10 ಗಂಟೆಯವರೆಗಿನ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಬ್ಯಾಂಕ್‍ಗಳು ಹಾಗೂ ಸರ್ಕಾರಿ ಕಚೇರಿಗಳು ಸೀಮಿತ ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಿದವು. ಜನಸಂಚಾರ ವಿರಳವಾಗಿತ್ತು. ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ವಾಹನಗಳ ಜಪ್ತಿ: ಸೋಮವಾರ ಬೆಳಿಗ್ಗೆ 10 ಗಂಟೆ ನಂತರ ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿ ವಶಪಡಿಸಿಕೊಂಡರು. ಸಂಜೆಯ ವೇಳೆಗೆ ಸುಮಾರು 100ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ಹಾಕಿಸಿಕೊಳ್ಳುವವರಿಗೆ ಸಂಚರಿಸಲು ವಿನಾಯಿತಿ ನೀಡಲಾಗಿತ್ತು. ಇದರಿಂದ ಲಸಿಕೆ ಹಾಕಿಸಿಕೊಳ್ಳುವವರು ಹಾಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವವರಿಗೆ ಯಾವುದೇ ಅಡ್ಡಿಯಾಗಲಿಲ್ಲ.
ನಗರದ ಡಿ.ಕ್ರಾಸ್, ಬಸ್ ನಿಲ್ದಾಣ, ಪ್ರವಾಸಿ ಮಂದಿರ ವೃತ್ತ ಮೊದಲಾದ ವೃತ್ತಗಳಲ್ಲಿ ಪೊಲೀಸ್ ಪಡೆ ಕಾವಲು ಹಾಕಲಾಗಿತ್ತು.
ತಾಲೂಕಿನ ಗುಂಜೂರು ಹಾಗೂ ಮಾಧುರೆ ಬಳಿ ಚೆಕ್ ಪೋಸ್ಟ್ ಮಾಡಲಾಗಿ, ಅಂತರ ಜಿಲ್ಲಾ ಓಡಾಟಕ್ಕೆ ಸರ್ಕಾರ ನಿಗದಿ ಪಡಿಸಿದ ತುರ್ತು ಅಗತ್ಯಗಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಪೊಲೀಸ್ ಇಲಾಖೆಯೊಂದಿಗೆ ಹೋಂ ಗಾರ್ಡ್ ಗಳು ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸಿದರು.
ಲಾಕ್‍ಡೌನ್ ಹಿನ್ನಲೆಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಹಾಲು ಹಾಗೂ ಹಣ್ಣು ಮತ್ತು ತರಕಾರಿಗಳ ತಳ್ಳುವ ಗಾಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..