ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಮಕ್ಕಳ ತಜ್ಞ ವೈದ್ಯರಗಳ ತಂಡ ಹಳ್ಳಿಗಳಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡುವ ಮೂಲಕ ಕೋವಿಡ್ ಸೋಂಕಿನ ಮೂರನೇ ಅಲೆ ಹರಡದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ತಾಲ್ಲೂಕು ಮಟ್ಟದ ಕೋವಿಡ್ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಮಕ್ಕಳಿಗೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ 50 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಹಾಗೂ ವಿಕಲಚೇತನ ಮಕ್ಕಳಿಗೆ ಎರಡು ತಾಲ್ಲೂಕಿಗೆ ಒಂದರಂತೆ ಎರಡು ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ ಎಂದರು.
ಪ್ರತಿ ತಾಲ್ಲೂಕಿನಲ್ಲಿ 5 ಮಕ್ಕಳ ತಜ್ಞ ವೈದ್ಯರನ್ನು ನೇಮಕ ಮಾಡಿಕೊಂಡು ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಸೂಚಿಸಿದ ಅವರು, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಆಹಾರ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ, ಮಕ್ಕಳು ಸೇವಿಸುವಂತಹ ಮಾತ್ರೆಗಳನ್ನು ನೀಡಬೇಕು ಎಂದು ಸಲಹೆ ನೀಡಿದರು.ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದು, ಶಿಕ್ಷಕರು ವಾರಕ್ಕೊಮ್ಮೆ ಕೋವಿಡ್ ಕುರಿತಾದ ಮಾಹಿತಿಯನ್ನು ನೀಡುವುದರ ಜೊತೆಗೆ ಜಾಗೃತಿ ಮೂಡಿಸುವಂತಾಗಬೇಕು ಎಂದರಲ್ಲದೆ, ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿರುವ ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಅವರಿಗೆ ಚಿಕಿತ್ಸೆ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಿಮ್ಹಾನ್ಸ್ ವೈದ್ಯರ ತಂಡದಿಂದ ಹಳ್ಳಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಲಾಕ್‌ಡೌನ್ ತೆರವುಗೊಂಡ ನಂತರ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಜಿಲ್ಲೆಗೆ ಬರಲಿದ್ದು, ಅವರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವುದನ್ನು ಮುಂದುವರಿಸಲಾಗುವುದು ಎಂದರು. ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಆದೇಶವಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದರು.
ಕಡಿಮೆ ಗುಣಮಟ್ಟದ ಸ್ಯಾನಿಟೈಸರ್ ಬಳಸುವುದರಿಂದ ಹಲವು ದುಷ್ಪರಿಣಾಮಗಳು ಎದುರಾಗುವ ಸಾಧ್ಯತೆಗಳಿರುವುದರಿಂದ ಉತ್ತಮ ಗುಣಮಟ್ಟದ ಸ್ಯಾನಿಟೈಸರ್ ಬಳಸಬೇಕು ಎಂದರು.
ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ ಅವರು ಮಾತನಾಡಿ, ಮುಂಗಾರು ಮಳೆಯು ಆರಂಭವಾಗಿದ್ದು, ನಗರ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರಲ್ಲದೆ, ಜನ ಜಾನುವಾರುಗಳಿಗೆ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಆಕಸ್ಮಿಕವಾಗಿ ಹಾನಿಯಾದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದು ಪರಿಹಾರ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪುಷ್ಪಲತಾ ಜಿ.ರಾಯರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….