ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 2021ರ ಏಪ್ರಿಲ್ 27 ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಲಾಕ್‌ಡೌನ್ ವಿಧಿಸಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬ್ಯಾಂಕ್, ಹಣಕಾಸು ಸಂಸ್ಥೆಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ಸಾಲ ವಸೂಲಾತಿಗಾಗಿ ಮನೆ-ಮನೆ ಭೇಟಿ ನೀಡಿ, ಒತ್ತಡ ಹೇರುವುದನ್ನು
ಜುಲೈ 31ರವರೆಗೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಅವಶ್ಯಕ ಚಟುವಟಿಕೆಗಳನ್ನು ಹೊರತುಪಡಿಸಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿರುವುದರಿಂದ ಜಿಲ್ಲೆಯ ರೈತ ವರ್ಗ, ಹೂ- ಹಣ್ಣು ತರಕಾರಿ ಬೆಳೆಗಾರರು, ಸಣ್ಣ ಮತ್ತು ಮಧ್ಯಮ ವರ್ಗದ ಉದ್ದಿಮೆದಾರರು, ವ್ಯಾಪಾರಿಗಳು, ರಸ್ತೆ ಬದಿ ವ್ಯಾಪಾರಿಗಳು, ಕಾರ್ಮಿಕರು ಮತ್ತು ಕುಶಲಕರ್ಮಿಗಳು ಹಾಗೂ ಇನ್ನಿತರ ಎಲ್ಲಾ ವರ್ಗದವರೂ ಆರ್ಥಿಕ ಸಂಕಷ್ಟಕ್ಕೊಳಗಾಗಿರುತ್ತಾರೆ. ಕೃಷಿ ಮತ್ತು ಕೃಷಿಯೇತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮತ್ತು ಬೆಲೆಯ ಕೊರತೆಯಿಂದಾಗಿ ಜಿಲ್ಲೆಯ ಬಹುತೇಕ ಜನರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುತ್ತಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ಎಲ್ಲಾ ಸಾರ್ವಜನಿಕ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಹಕಾರ ಸಂಸ್ಥೆ, ಖಾಸಗಿ ವಲಯದ ಬ್ಯಾಂಕ್, ಸಣ್ಣ ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಖಾಸಗಿ ವಲಯದ ಹಣಕಾಸು ಸಂಸ್ಥೆಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ಸಾಲ ವಸೂಲಾತಿಗಾಗಿ 2021ರ ಜುಲೈ 31 ರವರೆಗೆ ಮನೆ-ಮನೆ ಭೇಟಿ ನೀಡಿ, ಒತ್ತಡ ಹೇರುವುದನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿಯಲ್ಲಿ ನಿರ್ಬಂಧಿಸಲಾಗಿದೆ.
ಆರ್ಥಿಕ ಸಂಕಷ್ಟದಲ್ಲಿರುವ ಜಿಲ್ಲೆಯ ಗ್ರಾಹಕರು ತಾವು ವ್ಯವಹರಿಸುತ್ತಿರುವ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳನ್ನು ಸಂಪರ್ಕಿಸಿ, ಬ್ಯಾಂಕ್ ನಿಯಮಾವಳಿಗಳನುಸಾರ ಸಾಲ ಮರುಪಾವತಿ, ಕಂತುಗಳ ಮುಂದೂಡುವಿಕೆ ಹಾಗೂ ಸಾಲ ಪುನರ್ ರಚನೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….