ಬೆಂ.ಗ್ರಾ.ಜಿಲ್ಲೆ: ಇಂದಿನ ಮಕ್ಕಳು ಭವಿಷ್ಯದ ಜನಾಂಗವಾಗಿದ್ದು, ಅವರನ್ನು ಕೋವಿಡ್-19 ಮೂರನೇ ಅಲೆಯಿಂದ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ‘ಮಕ್ಕಳ ತಜ್ಞ ವೈದ್ಯರ ನಡೆ, ಹಳ್ಳಿ ಕಡೆ’ ಎಂಬ ವಿನೂತನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವ ಮೂಲಕ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಾಗುವುದು ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿಂದು “ಮಕ್ಕಳ ತಜ್ಞರ ನಡೆ, ಹಳ್ಳಿ ಕಡೆ(ಹಳ್ಳಿಗಳಲ್ಲಿ ಮಕ್ಕಳ ವೈದ್ಯಕೀಯ ತಪಾಸಣೆ ಹಾಗೂ ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಕಿಟ್ ಗಳ ವಿತರಣಾ) ಕಾರ್ಯಕ್ರಮ”ದಲ್ಲಿ ಅವರು ಮಾತನಾಡಿದರು.
ಕೋವಿಡ್-19 ಮೂರನೇ ಅಲೆ ಆರಂಭಕ್ಕೂ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ತಜ್ಞ ವೈದ್ಯರುಗಳ ತಂಡ ಹಳ್ಳಿಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ಸೂಕ್ತ ಚಿಕಿತ್ಸೆ ನೀಡುವುದರಿಂದ ಕೋವಿಡ್-19 ಮೂರನೇ ಅಲೆ ಹರಡುವಿಕೆ ತಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.
‘ಮಕ್ಕಳ ತಜ್ಞ ವೈದ್ಯರ ನಡೆ, ಹಳ್ಳಿ ಕಡೆ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ, ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಮೂಲಕ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ ನೀಡಬೇಕು ಹಾಗೂ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18 ವರ್ಷದೊಳಗಿನ 2,72,918 ಮಕ್ಕಳ ಪೈಕಿ, 0-6 ವರ್ಷದೊಳಗಿನ 58,637 ಮಕ್ಕಳಿದ್ದು, ಇವರಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿರುವ 863 ಮಕ್ಕಳನ್ನು ಗುರುತಿಸಲಾಗಿದೆ. ಅಲ್ಪ ಪ್ರಮಾಣದಲ್ಲಿ ಅಪೌಷ್ಟಿಕತೆ ಹೊಂದಿರುವ ಮಕ್ಕಳು ಸೇರಿದಂತೆ 1200 ಮಕ್ಕಳನ್ನು ಗುರುತಿಸಲಾಗಿದ್ದು, ಅವರ ಆರೋಗ್ಯ ತಪಾಸಣೆ ಹಾಗೂ ಅವರಿಗೆ ತಜ್ಞರ ಸಲಹೆಯಂತೆ ಕೆಎಂಎಫ್ ವತಿಯಿಂದ ಪೌಷ್ಟಿಕಾಂಶಯುಕ್ತ ಆಹಾರದ ಕಿಟ್(ಬಾದಾಮಿ ಪೌಡರ್, ಮಿಲ್ಕ್ ಪೌಡರ್, ಪೌಷ್ಟಿಕ ಬಿಸ್ಕೆಟ್, ಸಕ್ಕರೆ, ವಿಟಮಿನ್ ಜಿಂಕ್ ಸಿರಾಪ್) ಮಾಸ್ಕ್, ಡೆಟಾಯಿಲ್ ನೀಡಲಾಗುವುದು ಎಂದರು.
ಕೋವಿಡ್-19 ಮೂರನೇ ಅಲೆ ತಡೆಯಲು ಪ್ರತಿ ತಾಲ್ಲೂಕಿಗೆ 5 ತಜ್ಞ ವೈದ್ಯರ ತಂಡಗಳಂತೆ ಜಿಲ್ಲೆಯಲ್ಲಿ 20 ತಂಡಗಳು ಕಾರ್ಯನಿರ್ವಹಿಸಲಿದ್ದು, ಹಳ್ಳಿಗಳಿಗೆ ಭೇಟಿ ನೀಡಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಕ್ಕಳ ಮನೆ, ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರಲ್ಲದೆ, ಈ ಕಾರ್ಯಕ್ರಮ ರೂಪುಗೊಳ್ಳಲು ಸಹಕರಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಅಭಿನಂದನೆ ತಿಳಿಸಿದರು.
ಜಿಲ್ಲೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕವಾಗಿ ಆಕಾಶ್ ಆಸ್ಪತ್ರೆ ಹಾಗೂ ಎಂವಿಜೆ ಆಸ್ಪತ್ರೆಗಳಲ್ಲಿ ತಲಾ 25 ಬೆಡ್‌ಗಳು ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ 50 ಬೆಡ್‌ಗಳನ್ನು ಈಗಾಗಲೇ ಮೀಸಲಿರಿಸಲಾಗಿದೆ ಎಂದರು. ಅಲ್ಲದೆ, ಜಿಲ್ಲೆಯಲ್ಲಿ ಈಗಾಗಲೇ 6 ಮಕ್ಕಳ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪಾಲಕರ ಸಮೇತ ಆಸ್ಪತ್ರೆಗೆ ದಾಖಲಿಸುವ ಕ್ರಮ ಕೈಗೊಳ್ಳಲಾಗುವುದು. ಡಿಸೆಂಬರ್ ವೇಳೆಗೆ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ನೀಡುವ ಬಗ್ಗೆ ಪ್ರಧಾನಮಂತ್ರಿಗಳು ಘೋಷಿಸಿದ್ದು, ಲಸಿಕೆ ಎಲ್ಲರಿಗೂ ಲಭ್ಯವಾಗಲಿದೆ ಎಂದರು.
18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಪ್ರಯೋಗಗಳು ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಮೂಲಕ ಅವರ ಆರೋಗ್ಯವನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರಲ್ಲದೆ, ಕೋವಿಡ್ ನಿಯಂತ್ರಣಕ್ಕೆ ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಮಾತನಾಡಿ, ರಾಜ್ಯದಲ್ಲಿ ಕೋವಿಡ್‌ನಿಂದ ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ 47 ಮಕ್ಕಳು, ಒಬ್ಬ ಪೋಷಕರನ್ನು ಕಳೆದುಕೊಂಡ 2000 ಮಕ್ಕಳು ಇದ್ದು, ಬಾಲಸೇವಾ ಯೋಜನೆಯಡಿ ಸರ್ಕಾರದಿಂದ ಅವರಿಗೆ ರೂ.3500 ಗಳ ಸಹಾಯಧನ ನೀಡಲಾಗುವುದು ಎಂದರಲ್ಲದೆ, ಉಚಿತ ಶಿಕ್ಷಣ ಹಾಗೂ ಉನ್ನತ ವ್ಯಾಸಂಗಕ್ಕೆ ಅವರಿಗೆ ಲ್ಯಾಪ್‌ಟಾಪ್ ನೀಡುವ ಮೂಲಕ ಅವರ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಹಾಗೂ ಹೆಣ್ಣು ಮಕ್ಕಳಿಗೆ 21 ವರ್ಷದ ನಂತರ 1 ಲಕ್ಷ ರೂಪಾಯಿಗಳ ನೆರವು ನೀಡಲಾಗುವುದು ಎಂದರು.
ಕೋವಿಡ್ ಮೂರನೇ ಅಲೆ ತಡೆಯಲು ಅಂಗನವಾಡಿ ಕಾರ್ಯಕರ್ತೆಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಲಾಗುತ್ತಿದೆ ಎಂದರು.
ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಪಾಲಕರಿಗೂ ಉಳಿದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರಲ್ಲದೆ, ವಿಕಲಚೇತನರಿಗೆ ಮತ್ತು 10 ವರ್ಷ ಮೇಲ್ಪಟ್ಟ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಕೋವಿಡ್ ಹರಡುವ ಸಾಧ್ಯತೆ ಇರುವುದರಿಂದ ಅಂತಹ ಮಕ್ಕಳನ್ನು ಗುರುತಿಸಿ ಪೌಷ್ಟಿಕಾಂಶಯುಕ್ತ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಅವರ ಆರೋಗ್ಯ ಕಾಪಾಡುವುದು ಮುಖ್ಯ ಉದ್ದೇಶವಾಗಿದ್ದು, ವಲಸೆ ಹೋಗುವ ಗರ್ಭಿಣಿ ಹಾಗೂ ಬಾಣಂತಿಯರಿಗೂ ಅಂಗನವಾಡಿ ಕೇಂದ್ರಗಳಿಂದ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ, ತಜ್ಞರು ಕರೊನಾ ಆರಂಭದಲ್ಲಿ ಐವತ್ತು ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೋವಿಡ್-19 ಹರಡುತ್ತದೆ ಎಂದು ತಿಳಿಸಿದ್ದರು ಆದರೆ ಕರೊನಾ ರೂಪಾಂತರಗೊಂಡ ನಂತರ ಎಲ್ಲರಿಗೂ ಹರಡುತ್ತಿದ್ದು, ಮೂರನೇ ಅಲೆಯಿಂದ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ತಿಳಿದುಬಂದಿರುವ ಹಿನ್ನೆಲೆ, ಇಂತಹ ಸಂದರ್ಭದಲ್ಲಿ ಮಕ್ಕಳ ತಜ್ಞ ವೈದ್ಯರ ನಡೆ ಹಳ್ಳಿ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಿರುವುದು ಶ್ಲಾಘನೀಯ ಎಂದರು.
ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರದ ಕಿಟ್ ವಿತರಣೆ ಮಾಡುವುದರಿಂದ ಮಕ್ಕಳಲ್ಲಿ ಪೌಷ್ಟಿಕತೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರಲ್ಲದೆ, ಈ ಕಾರ್ಯಕ್ರಮ ನಿರಂತರವಾಗಿ ನಡೆಯುವುದರಿಂದ ಮಕ್ಕಳನ್ನು ಕೋವಿಡ್-19 ನಿಂದ ರಕ್ಷಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೋವಿಡ್‌ನಿಂದ ಮಕ್ಕಳನ್ನು ಸಂರಕ್ಷಿಸುವ ಸಲಹೆಗಳನ್ನು ಒಳಗೊಂಡ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು ಹಾಗೂ ಮಕ್ಕಳ ತಜ್ಞ ವೈದ್ಯರ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮೊಬೈಲ್ ಕ್ಲಿನಿಕ್ ಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ತಹಶೀಲ್ದಾರ್ ಅನಿಲ್‌ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್.ಎನ್, ಸಿಡಿಪಿಓ ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿ ಸಂಜಯ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….