ಬೆಂ.ಗ್ರಾ.ಜಿಲ್ಲೆ: ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತುರ್ತಾಗಿ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ, ಕೋವಿಡ್-19 ಎರಡನೇ ಅಲೆಯ ತೀವ್ರತೆಯಿಂದ ಸಂಕಷ್ಟದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ್ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ಕಾರ್ಮಿಕ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಅವರಿಗೆ ಸೂಕ್ತ ಸಹಾಯಧನ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಕೋವಿಡ್-19 ಪರಿಹಾರ ನಿಧಿಯು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ತಲುಪಲಿದ್ದು, ಈ ಕುರಿತಂತೆ ವಿವಿಧ ಸಂಘ ಸಂಸ್ಥೆಗಳು ತಮ್ಮಲ್ಲಿ ನೋಂದಣಿಯಾಗಿರುವ ಕಾರ್ಮಿಕರಿಗೆ ತಿಳಿಸಬೇಕು. ಇದರಿಂದ ಹಲವರಲ್ಲಿರುವ ಗೊಂದಲ ನಿವಾರಣೆಯಾಗಲಿದೆ ಎಂದರು.
ಕಳೆದ ಬಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆಲವರಿಗೆ ಸಹಾಯಧನ ತಲುಪುವುದು ವಿಳಂಬವಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಜೊಡಣೆಯಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಅಸಂಘಟಿತ ವಲಯದ ಕಾರ್ಮಿಕರ ಜೊತೆ ಆಗಿಂದಾಗ್ಗೆ ಸಭೆಗಳನ್ನು ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ತಮ್ಮಣ್ಣ, ವೀಣಾ, ಕಾರ್ಮಿಕ ಅಧಿಕಾರಿ ನಾಗೇಂದ್ರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….