ಬೆಂ.ಗ್ರಾ.ಜಿಲ್ಲೆ: ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆಯದೇ ಇರುವವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಮಾಹಿತಿ ನೀಡಬೇಕು, ತಪ್ಪಿದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಮಾಹಿತಿ ತಲುಪಿಸಿ ತ್ವರಿತವಾಗಿ ಎರಡನೇ ಡೋಸ್ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಲಸಿಕೆ ಎರಡನೇ ಡೋಸ್ ಪಡೆಯದೇ ಇರುವ ಫಲಾನುಭವಿಗಳಿಗೆ ಲಸಿಕೆ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಸಿಕೆಗೆ ನೀಡಲು ಯಾವುದೇ ಸಮಸ್ಯೆ ಇಲ್ಲವಾದ್ದರಿಂದ ಎರಡನೇ ಡೋಸ್ ಲಸಿಕೆ ಪಡೆಯುವವರಿಗೆ ಆದಷ್ಟು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಿ ಎಂದು ಸಲಹೆ ನೀಡಿದರು.
ವಿದೇಶಗಳಿಗೆ ವ್ಯಾಸಂಗ ಮಾಡಲು ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಪಟುಗಳಿಗೆ ಲಸಿಕೆ ನೀಡಲು ಸೂಚಿಸಿದರಲ್ಲದೆ, ಕೊರೋನಾ ಮುಂಚೂಣಿ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆಯದೆ ಇರುವವರು ಸಹ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ಸಿ.ಎಸ್.ಆರ್ ನಿಧಿಯಡಿ ಕಾರ್ಖಾನೆಗಳು ಒದಗಿಸುವ ಸೌಲಭ್ಯಗಳನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಬಳಸಿಕೊಂಡು, ಹೆಚ್ಚಿನ ಸೌಲಭ್ಯಗಳನ್ನು ನಗರ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲುಪಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಘಟಕದ ಸಂಚಾಲಕಿ ಡಾ. ಶಾಂತಲಾ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….