ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಕ್‌ಶಿಫ್ಟ್ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮವು ಮುಂದಿನ ವಾರ ನಡೆಯಲಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ, ಬಾಕಿ ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳು ಮುಂದಿನ ವಾರ ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆ ತಾಲ್ಲೂಕಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪ ಮುಖ್ಯಮಂತ್ರಿಗಳು, ವೈದ್ಯಕೀಯ ಸಚಿವರು, ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕೋವಿಡ್ ನಿಯಮಗಳನ್ನು ಪಾಲಿಸುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದರಲ್ಲದೆ, ವಿದ್ಯುತ್ ಸಂಪರ್ಕವನ್ನು ಸಮಪರ್ಕವಾಗಿ ಒದಗಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.
ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆ ಇದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ನಿರ್ದಿಷ್ಟ ಜನರಿಗೆ ಮಾತ್ರ ಅವಕಾಶ ನೀಡಬೇಕು ಹಾಗೂ ಶಿಷ್ಷಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ತಹಸೀಲ್ದಾರ್ ಟಿ.ಎಸ್.ಶಿವರಾಜ್, ಹೊಸಕೋಟೆ ತಹಶೀಲ್ದಾರ್ ಗೀತಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಧರ್ಮೇಂದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಿ ವೇದಿಕೆ ನಿರ್ಮಾಣ ಹಾಗೂ ಮೇಕ್‌ಶಿಫ್ಟ್ ಆಸ್ಪತ್ರೆ ಕಾಮಗಾರಿ ಕುರಿತು ಪರಿಶೀಲಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..