ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರಿಂದ ಯುವಕರು ಮದ್ಯದ ಅಮಲಿಗೆ ಒಳಗಾಗುತ್ತಾರೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ. ಆದರೆ ಅಬಕಾರಿ ಇಲಾಖೆಯವರು ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ದೂರಿದರು. ಈ ಹಿನ್ನಲೆಯಲ್ಲಿ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಡಿಸಿಯವರು ಸೂಚಿಸಿದರು.
ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಗ್ರಾಮದ ಬಾಬೂ ಜಗಜೀವನ್ ರಾಂ ಕಾಲೋನಿಗೆ ಮಂಜೂರಾಗಿರುವ ಸ್ಮಶಾನಕ್ಕೆ ದಾರಿ ಇಲ್ಲದೆ ಕೆರೆ ಅಂಗಳದಲ್ಲಿ ಶವಸಂಸ್ಕಾರ ಮಾಡುತ್ತಿರುವುದಾಗಿ ಸದಸ್ಯ ಜಿ.ವೆಂಕಟರಮಣಪ್ಪ ಅವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೌರಿಬಿದನೂರು ತಹಸೀಲ್ದಾರ್ ಶ್ರೀನಿವಾಸ್ ಅವರು, ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ಆದಷ್ಟು ಬೇಗಾ ಸ್ಮಶಾನಕ್ಕೆ ದಾರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಮಿತಿಯ ಸದಸ್ಯರಾದ ಜಿ.ವಿ.ವಿಶ್ವನಾಥ್ ಅವರು ಮಾತನಾಡಿ, ಗುಡಿಬಂಡೆಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಳೆಯ ಕೋರ್ಟ್ ಕಟ್ಟಡವು ಖಾಲಿಯಿದ್ದು , ಅಲ್ಲಿ ಸ್ವಚ್ಛತೆ ಮರಿಚೀಕೆಯಾಗಿದೆ , ಈ ಜಾಗವನ್ನು ಯಾವುದಾದರೂ ಒಂದು ಸರ್ಕಾರಿ ಕಚೇರಿಯ ಕೆಲಸಕ್ಕೆ ಅಥವಾ ಕಚೇರಿಗೆ ಬಳಸಿಕೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗುಡಿಬಂಡೆ ತಹಸೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಂಬಂಧಿಸಿದ ಸ್ಮಶಾನಗಳ ದಾರಿ, ಪರಿಶಿಷ್ಟರ ಜಮೀನುಗಳ ಖಾತೆ ಬಗ್ಗೆ ,ಜಮೀನು ಒತ್ತುವರಿ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನಗಳಿಗೆ ಜಮೀನು ಮಂಜೂರು,ಬಾಲ್ಯವಿವಾಹ, ಪರಿಶಿಷ್ಟರ ಮೇಲಿನ ದೌರ್ಜನ್ಯ ಸೇರಿದಂತೆ ಇತರೆ ವಿಷಯಗಳ ಕುರಿತ ದೂರಿನ ವಿವರ ಪಡೆದು ಈ ಎಲ್ಲಾ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದ್ ರೆಡ್ಡಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿ.ವಿ.ಲಕ್ಷ್ಮಣ್ ರಾಜ್, ಜಿ.ವೆಂಕಟರಮಣಪ್ಪ, ಎಸ್.ಎನ್.ಅಂಜಿನಪ್ಪ, ವಿ.ಶ್ರೀನಿವಾಸ್, ಜಿ.ವಿ.ವಿಶ್ವನಾಥ್, ಮಂಜುಳಾ, ಗಂಗಾಧರ್, ಸುಧಾಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..